ಕಲಬುರಗಿ: ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಮೆಗಾ ಜವಳಿ ಪಾರ್ಕ್‌ನ್ನು ಸ್ಥಾಪಿಸಲಾಗುತ್ತಿದ್ದು ಇದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ. ಅನುದಾನವನ್ನು ಈ ಬಾರಿಯ ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದೂ ಸಚಿವರು ಹೇಳಿದ್ದಾರೆ.ಕಲಬುರಗಿ ಜಿಲ್ಲಾಧಿಕಾರಿ ಕನೀಜ್ ಫಾತೀಮಾ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನ ವಿಕಾಸೌಧದ ಕಚೇರಿಯಲ್ಲಿ ಸಚಿವರು ನಡೆಸಿದ ಸಭೆಯಲ್ಲಿ ಜವಳಿ ಪಾರ್ಕ್ ಸಜ್ಜುಗೊಳಿಸಲು ಮೂಲಭೂತ ಸೌಲಭ್ಯಗಳನ್ನು ವಿಸ್ತರಿಸುವ ಸಂಬಂಧದಲ್ಲಿ ಚರ್ಚಿಸಲಾಯಿತು.
ಪಾರ್ಕ್ ಅವಶ್ಯಕತೆಗಳಿಗನುಗುಣವಾಗಿ ಸುಮಾರು 16 ಎಂ.ಎಲ್.ಡಿ ನೀರಿನ ಅವಶ್ಯಕತೆಯಿದ್ದು, ಮದಿ ಗ್ರಾಮದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಬ್ಯಾರೇಜ್‌ನಿಂದ ನೀರು ಪೂರೈಕೆ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ಪಾರ್ಕ್ ಆವರಣದಲ್ಲಿನ ಕೆರೆಯನ್ನು ಪುನರ್ಜೀವಗೊಳಿಸುವುದು, ಮಳೆನೀರು ಕೊಯಲು ಪದ್ಧತಿ ಅಳವಡಿಕೆ ಮೂಲಕ ನೀರನ್ನು ಬಳಸಿಕೊಳ್ಳುವ ಪರ್ಯಾಯ ವ್ಯವಸ್ಥೆಗಳನ್ನೂ ಮಾಡಲು ಸೂಚಿಸಿದರು.
ಜವಳಿ ಪಾರ್ಕ್ ಸಂಪರ್ಕಿಸುವ ರಸ್ತೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿದ ಸಚಿವರು ದೀರ್ಘಕಾಲ ಬಾಳಿಕೆ ಬರುವ ರಸ್ತೆಗಳನ್ನು ನಿರ್ಮಿಸಲು ಸಚಿವರು ಸೂಚಿಸಿದರು. ಜವಳಿ ಪಾರ್ಕ್ ಆವರಣದಲ್ಲಿ ಸೋಲಾರ್ ದೀಪಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಮಿತವ್ಯಯ ಮಾಡಲು ಸಲಹೆ ಮಾಡಿದ ಸಚಿವರು ಉಳಿದಂತೆ ಜವಳಿ ಪಾರ್ಕ್‌ಗೆ 180 ಮೆಗಾ ವ್ಯಾಟ್ ವಿದ್ಯುತ್ ಸಂಪರ್ಕ ಪೂರೈಸುವ ಸಂಬಂಧ 220 ಕೆ.ವಿ ಪವರ್ ಸಬ್‌ಸ್ಟೇಷನ್ ನಿರ್ಮಿಸಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಮನವಿಯಂತೆ ಪಾರ್ಕ್ ಆವರಣದಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ತಿಳಿಸಿದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ ವಿಪುಲ್ ಬನ್ಸಾಲ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜವಳಿ ಅಭಿವೃದ್ಧಿ ಆಯುಕ್ತೆ ಕೆ.ಜ್ಯೋತಿ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

