ಬೆಳಗಾವಿ: ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಜರುಗಿದ ನಮ್ಮಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಲೋಗೋ ಅನ್ನು ವಿದ್ಯಾರ್ಥಿಗಳಿಂದ ಅನಾವವರಣಗೊಳಿಸಿ ದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸರಕಾರದ ಜೊತೆಗೆ ದಾನಿಗಳು ಕೈಜೋಡಿಸಿದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಬಹುದಾಗಿದೆ ಎಂದರು. ಶಾಲಾ ಮಕ್ಕಳಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವದು ಸರಕಾರದ ಧ್ಯೇಯವಾಗಿದ್ದು, ಈ ಹಿನ್ನಲೆಯಲ್ಲಿ ಅಜೀಂ ಪ್ರೇಮಜಿ ಫೌಂಡೇಶನ್ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಮೊಟ್ಟೆಯನ್ನು ವಾರದ ಆರು ದಿನಗಳ ಕಾಲ ವಿತರಿಸುವ ಕಾರ್ಯಕ್ರಮಕ್ಕೆ ಸೆ. 25 ರಂದು ಯಾದಗಿರಿಯಲ್ಲಿ ಚಾಲನೆ ನೀಡಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ ಮಹತ್ತರ ಬದಲಾವಣೆ ತರುವಲ್ಲಿ ಶಿಕ್ಷಣ ಸಚಿವರು ಪ್ರಯತ್ನಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುವದರ ಮೂಲಕ ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನೀಡುವದೇ ಸರಕಾರದ ಮುಖ್ಯ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ಮಾತನಾಡಿ, ಸಮಾಜ, ದೇಶ ಬೆಳೆಯಬೆಕಾದರೆ ಸರ್ಕಾರಿ ಸ್ವಾಮ್ಯದ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

