ಬೆಂಗಳೂರು: ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬೆಂಗಳೂರು ನಗರ, ಗ್ರಾಮೀಣ ಮತ್ತು ಸುತ್ತಮುತ್ತಲಿನ ತಾಲ್ಲೂಕುಗಳನ್ನು ಸಂಪರ್ಕಿಸುವ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದೆ.
ಸಂಸತ್ ಅಧಿವೇಶನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ರವರ ಮನವಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸ್ಪಂದಿಸಿದ್ದು, ಕಾಮಗಾರಿಗೆ ಅನುಮೋದನೆ ನೀಡಿದ್ದಾರೆ.
₹4,750 ಕೋಟಿ ಮೌಲ್ಯದ ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಯೋಜನೆಯಿಂದ ಬೆಂಗಳೂರು ನಗರ, ಗ್ರಾಮೀಣ ಮತ್ತು ಸುತ್ತಮುತ್ತಲಿನ ತಾಲ್ಲೂಕುಗಳಾದ ಕನಕಪುರ, ಮಾಗಡಿ, ರಾಮನಗರ, ದಾಬಸ್ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ ಹಾಗೂ ಆನೇಕಲ್ ಪ್ರದೇಶಗಳಿಗೆ ಪ್ರಯೋಜನವಾಗಲಿದೆ. ಇದರಿಂದ ಬೆಂಗಳೂರು ಸುತ್ತಮುತ್ತಲಿನ ಸಂಚಾರ ದಟ್ಟಣೆಯನ್ನು ನಿವಾರಿಸುವುದರ ಜೊತೆಗೆ ಪ್ರಯಾಣದ ಸಮಯವು ಕಡಿತಗೊಳುತ್ತದೆ. ಈ ಯೋಜನೆಯನ್ನು ಅನುಮೋದಿಸಿರುವುದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ.
ಈ ಯೋಜನೆಯನ್ನು ಭಾರತ್ ಮಾಲಾ ಪರಿಯೋಜನಾ ಯೋಜನೆಯಡಿಯಲ್ಲಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನಿರ್ಮಿಸಲಾಗುತ್ತಿದೆ. ಇದರಿಂದ ಬೆಂಗಳೂರಿನ ಸಂಚಾರ ಸಮಸ್ಯೆಗಳಿಗೆ ದೀರ್ಘಕಾಲಿಕ ಪರಿಹಾರ ಸಿಕ್ಕಿ ಲಕ್ಷಾಂತರ ದೈನಂದಿನ ಪ್ರಯಾಣಿಕರಿಗೆ ಪ್ರಯಾಣವನ್ನು ಸುಲಭಗೊಳಿಸಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

