ಬೆಳಗಾವಿ: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಜೊತೆಗೆ ದಾನಿಗಳು ಕೈಜೋಡಿಸಿದ್ದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸಲು ಸಾಧ್ಯ ಎಂದು ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದ ಸುವರ್ಣ ವಿಧಾನಸೌಧದಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಲೋಗೋ ವಿದ್ಯಾರ್ಥಿಗಳಿಂದ ಅನಾವರಣಗೊಳಿಸಿ ದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯ ಉಜ್ವಲಗೊಳಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಸಿಎಂ ಸಿದ್ದರಾಮಯ್ಯ ತಾವು ಕಲಿತ ಸಿದ್ಧರಾಮನಹುಂಡಿಯಲ್ಲಿನ ಸರ್ಕಾರಿ ಶಾಲೆಗೆ ಹತ್ತು ಲಕ್ಷ ರೂ. ತಮ್ಮ ವೇತನದಿಂದ ದಾನ ನೀಡಿದ್ದು ಎಲ್ಲ ಶಾಸಕ ಮತ್ತು ಸಚಿವರಿಗೆ ಪ್ರೇರಣೆ. ದಾನಿಗಳು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಸಹಾಯ ಮಾಡಿದ್ದಲ್ಲಿ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಬಹುದು ಎಂದರು.
ಶಿಕ್ಷಕರು ತಮ್ಮ ಶಾಲೆಗೆ ಒಂದು ತಿಂಗಳ ವೇತನ ದಾನವಾಗಿ ನೀಡಿದ್ದಲ್ಲಿ ಇತರರು ಪ್ರೇರಣೆಗೊಂಡು ಸರ್ಕಾರಿ ಶಾಲೆ ಅಭಿವೃದ್ಧಿಪಡಿಸಬಹುದು. ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಕರಿದ್ದು ಪಾಲಕರು ಮಕ್ಕಳನ್ನು ಪ್ರತಿದಿನ ಶಾಲೆಗೆ ಕಳುಹಿಸುವ ಜೊತೆಗೆ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ಅರಿತಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಬಹುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

