ಕಲಬುರಗಿ: ಕಲಬುರಗಿಯಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಭರಪೂರ ಕೊಡುಗೆ ನೀಡಲಾಗಿದೆ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲು ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಸಲಾಗಿದ್ದು, ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆ ಜಾರಿಗೆ ಅನುಮೋದನೆ ನೀಡಲು ನಿರ್ಧರಿಸಲಾಗಿದೆ. ಇದರ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 45 ಹೊಸ ಆರೋಗ್ಯ ಕೇಂದ್ರಗಳು ಸ್ಥಾಪನೆಯಾಗಲಿವೆ. 31 ಸಮುದಾಯ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ ಏರಲಿವೆ. 9 ತಾಲೂಕು ಆಸ್ಪತ್ರೆಗಳನ್ನು ಉಪ ವಿಭಾಗೀಯ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು. 2 ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸುವ ನಿರ್ಧಾರ ಮಾಡಲಾಗಿದೆ.
ಕೊಪ್ಪಳದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಕಾಮಗಾರಿಗೆ 56 ಕೋಟಿ ರೂ. ಮೊತ್ತದಲ್ಲಿ ಅನುದಾನ ನೀಡಲು ಒಪ್ಪಿಗೆ ಪಡೆಯುವ ಬಗ್ಗೆ ಚರ್ಚೆ ನಡೆಸಲಾಗಿದೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತೆಲಂಗಾಣ ಗಡಿ ಪುಟ್ಟ ಪಾಕ ರಾಜ್ಯ ಹೆದ್ದಾರಿ ಕಾಗಿನ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು 53 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಸಲಾಗಿದೆ.
ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಅಂಜನಾದ್ರಿ ಬೆಟ್ಟ, ಬಳ್ಳಾರಿ ಕೋಟೆ, ಬೈಲಾಪುರ ಮೈಲಾರಲಿಂಗೇಶ್ವರ ದೇವಸ್ಥಾನಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ರೋಪ್ ವೇ ಅಭಿವೃದ್ಧಿಪಡಿಸಲು ತಾತ್ವಿಕ ಅನುಮೋದನೆ ನೀಡುವ ಸಾಧ್ಯತೆಯಿದೆ. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿರುವ ಅಶೋಕನ ಶಿಲಾ ಶಾಸನ ಪ್ರದೇಶದಲ್ಲಿ 10 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಗತ್ಯ ಪ್ರವಾಸಿ ಸೌಲಭ್ಯಗಳನ್ನು ಒದಗಿಸಲು ಅನುಮೋದನೆ ಸಿಗುವ ನಿರೀಕ್ಷೆಯಿದೆ. ಕಲಬುರಗಿ ಜಿಲ್ಲೆಯಲ್ಲಿ 515 ನೂತನ ಅಂಗನವಾಡಿ ಕಟ್ಟಡಗಳನ್ನು 118.45 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಕ್ಯಾಬಿನೆಟ್ ಅನುಮೋದನೆ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

