ಮೈಸೂರು: ಜಿಲ್ಲೆಯ ಹಿಮ್ಮಾವು ಗ್ರಾಮದಲ್ಲಿ ಚಿತ್ರನಗರಿ (ಫಿಲಂ ಸಿಟಿ ) ನಿರ್ಮಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಪ್ರಮುಖ ನಿರ್ಧಾರಕ್ಕೆ ಬಂದಿದ್ದು, 110 ಎಕರೆ ಕೆಐಎಡಿಬಿ ಜಮೀನು ಹಸ್ತಾಂತರಿಸಲು ಆದೇಶ ನೀಡಿದ್ದಾರೆ.
ಸಿದ್ಧರಾಮಯ್ಯ ಅವರ ತವರೂರಾದ ಮೈಸೂರಿನಲ್ಲಿ ಫಿಲ್ಮ್ ಸಿಟಿ ಸ್ಥಾಪಿಸುವುದು ಅವರ ಕನಸಿನ ಯೋಜನೆಯಾಗಿದ್ದು, ಹಿಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಾಣವಾಗುವ ಉದ್ದೇಶವಿದ್ದು, ಇದು ಸಿದ್ದರಾಮಯ್ಯ ಅವರ ವಿಧಾನಸಭಾ ಕ್ಷೇತ್ರವಾದ ವರುಣಾ ವ್ಯಾಪ್ತಿಯಲ್ಲಿ ಬರುತ್ತದೆ.
ಮೊದಲ ಹಂತದ ಯೋಜನೆಯನ್ನು ಕೂಡಲೇ ಪ್ರಾರಂಭಿಸಲು ಸೂಚನೆ ನೀಡಿರುವ ಸಿದ್ದರಾಮಯ್ಯ, ಪಿಪಿಪಿ (ಸಾರ್ವಜನಿಕ- ಖಾಸಗಿ ಸಂಸ್ಥೆಗಳ ಸಹಭಾಗಿತ್ವ) ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್ ಅಡ್ವೈಸರ್ ಮೂಲಕ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ (2017) ಮೈಸೂರಿನಲ್ಲಿ ಚಿತ್ರನಗರಿ ಆರಂಭಿಸುವ ಬಗ್ಗೆ ಯೋಜನೆ ರೂಪಿಸಲಾಗಿತ್ತು. ಬಳಿಕ 2018 ರಲ್ಲಿ ಕುಮಾರಸ್ವಾಮಿ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ವೇಳೆ ರಾಮನಗರದಲ್ಲಿ ಚಿತ್ರ ನಗರಿ ಆರಂಭಿಸುವ ಬಗ್ಗೆ ನಿರ್ಧಾರಕ್ಕೆ ಬಂದಿದ್ದರು. 2020 ರಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಬೆಂಗಳೂರು ಹೊರವಲಯದ ಕನಕಪುರ ರಸ್ತೆ ತಾತಗುಣಿಯ ರೋರಿಚ್ ದೇವಿಕಾರಾಣಿ ಎಸ್ಟೇಟ್‌ನಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ಪ್ರಕಟಿಸಿದ್ದರು. ಈಗ ಮತ್ತೆ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೈಸೂರಿನ ಹಿಮ್ಮಾವು ಪ್ರದೇಶದಲ್ಲೇ ಚಿತ್ರನಗರಿ ಸ್ಥಾಪಿಸುವ ನಿರ್ಧಾರಕ್ಕೆ ಬರಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

