Breaking News

ಸಿದ್ದರಾಮಯ್ಯ ರಾಜೀನಾಮೆ ಅಗತ್ಯವಿಲ್ಲ: ಸಿಎಂ ಪರ ನಿಂತ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್‌ ಪುರಸ್ಕರಿಸಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯವಾಗಿ ಹಿನ್ನಡೆ ಅನುಭವಿಸಿದ್ದಾರೆ.
ಸಿದ್ದರಾಮಯ್ಯ ಅವರ ರಾಜೀನಾಮೆಗೂ ವಿರೋಧ ಪಕ್ಷಗಳ ಒತ್ತಡ ತೀವ್ರವಾಗಿದೆ. ಆದರೆ, ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಹಾಗೂ ಅವರ ಹಿಂದೆ ಬಲವಾಗಿ ನಿಲ್ಲುವುದಾಗಿ ಕಾಂಗ್ರೆಸ್‌ ಪಕ್ಷ ಸ್ಪಷ್ಟ ಪಡಿಸಿದೆ. ಕಾಂಗ್ರೆಸ್‌ ಹೈಕಮಾಂಡ್ ಕೂಡಾ ಸಿದ್ದರಾಮಯ್ಯ ಅವರ ಪರ ನಿಂತಿದೆ. ಬಿಜೆಪಿ ರಾಜಕೀಯ ಸಂಚಿನ ಭಾಗವಾಗಿ ಈ ಹಗರಣ ಆರೋಪ ಕೇಳಿಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರನ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ ಪಕ್ಷ ಅವರ ಜತೆ ನಿಲ್ಲುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಒಟ್ಟಾರೆಯಾಗಿ ಹೈಕಮಾಂಡ್‌ ಸಂದೇಶವನ್ನು ನೀಡಿರುವುದಾಗಿ ಕಾಂಗ್ರೆಸ್‌ನ ಉನ್ನತ ಮೂಲಗಳು ದ ಫೆಡರಲ್‌ ಕರ್ನಾಟಕಕ್ಕೆ ತಿಳಿಸಿವೆ.
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತಾವು ಹಾಗೂ ಇಡೀ ಪಕ್ಷ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವುದಾಗಿ ಹೇಳಿದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ವಿವಿಧ ಯೋಜನೆಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅದನ್ನು ಬಿಜೆಪಿಗೆ ರಾಜಕೀಯವಾಗಿ ಸಹಿಸಲು ಸಾಧ್ಯವಾಗುತ್ತಿಲ್ಲ. ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಈ ರೀತಿ ರಾಜಕೀಯ ಸಂಚು ನಡೆಸಿದ್ದು, ಅದನ್ನು ಎದುರಿಸುವುದಾಗಿ ಶಿವಕುಮಾರ್‌ ಹೇಳಿದ್ದಾರೆ.
ನಾವೆಲ್ಲರೂ ಸಿದ್ದರಾಮಯ್ಯ ಅವರ ಜತೆ ಇದ್ದೇವೆ, ಈ ಹಿಂದೆ ನನ್ನನ್ನೂ ರಾಜಕೀಯ ಸಂಚಿನ ಮೂಲಕ ಪ್ರಕರಣ ದಾಖಲಿಸಿ ಜೈಲು ಸೇರುವಂತೆ ಮಾಡಿದ್ದರು. ಅದೇ ರೀತಿ ಈಗ ಸಿದ್ದರಾಮಯ್ಯ ಅವರ ರಾಜಕೀಯ ಏಳಿಗೆಯನ್ನು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ. ದೇಶದೆಲ್ಲೆಡೆ ಬಿಜೆಪಿ ವಿರೋಧ ಪಕ್ಷಗಳ ನಾಯಕರನ್ನು ಹಣಿಯಲು ಯತ್ನಿಸುತ್ತಿರುವುದರ ಭಾಗ ಇದಾಗಿದೆ ಎಂದು ಅವರು ವಿಶ್ಲೇಷಿಸಿದರು.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *