ಕಲಬುರಗಿ: ಸತತವಾಗಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಹಿಂದುಳಿಯುತ್ತಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಶಿಕ್ಷಣ ತಜ್ಞ ಗುರುರಾಜ ಕರಜಗಿ ನೇತೃತ್ವದಲ್ಲಿ ಆರು ಜನ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷ ಡಾ.ಅಜಯ್ ಸಿಂಗ್ ತಿಳಿಸಿದರು.
ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಜಗಿ ಅವರೊಂದಿಗೆ ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಡಾ. ರುದ್ರೇಶ್, ಹಿರೇಮಠ ಸ್ವಾಮೀಜಿ, ಬಳ್ಳಾರಿಯ ಫಾದರ್ ಫ್ರಾನ್ಸಿಸ್, ಬೀದರ್‌ನ ಶಹೀನ್ ವಿದ್ಯಾಸಂಸ್ಥೆಗಳ ಮುಖ್ಯಸ್ಥ ಅಬ್ದುಲ್ ಖದೀರ್ ಸದಸ್ಯರಾಗಿ ಇರಲಿದ್ದು, ಸದಸ್ಯ ಕಾರ್ಯದರ್ಶಿಯಾಗಿ ಎನ್.ಬಿ. ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.
ಈ ಸಮಿತಿಯು ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಶಾಲೆಗಳಿಗೆ ಸಂಚರಿಸಿ ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಜನವರಿ ಅಂತ್ಯ ಅಥವಾ ಫೆಬ್ರುವರಿ ಮೊದಲ ವಾರದಲ್ಲಿ ವರದಿ ನೀಡಲಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಹೆಚ್ಚಿಸಲು ಏನು ಸಿದ್ಧತೆ ನಡೆಸಬೇಕು ಎಂಬ ಬಗ್ಗೆ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಕುರಿತೂ ಸಲಹೆ ನೀಡಲಿದೆ ಎಂದು ಹೇಳಿದರು. ಕಳೆದ ಎರಡು ವರ್ಷಗಳಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಾಸಿಂಗ್ ಪ್ಯಾಕೇಜ್ ನೀಡಲಾಗುತ್ತಿತ್ತು. ಅಷ್ಟಾಗಿ ಸುಧಾರಣೆ ಕಂಡು ಬರದ ಹಿನ್ನೆಲೆಯಲ್ಲಿ ಈ ಬಾರಿ ಎಂಟು ಹಾಗೂ ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗೂ ಅಕ್ಷರ ಆವಿಷ್ಕಾರ ಯೋಜನೆಯಡಿ ಪಾಸಿಂಗ್ ಪ್ಯಾಕೇಜ್ ನೀಡಲಾಗುವುದು ಎಂದು ಡಾ. ಅಜಯ್ ಸಿಂಗ್ ಮಾಹಿತಿ ನೀಡಿದರು.
ಪ್ರತಿ ವರ್ಷ ಪ್ರಥಮ್ ಪ್ರತಿಷ್ಠಾನವು ಸಲ್ಲಿಸಿದಂತಹ ವರದಿಯ ಅನ್ವಯ ಕಲಬುರಗಿ ವಿಭಾಗದಲ್ಲಿ ಐದನೇ ತರಗತಿಯ ಶೇ 10.9ರಷ್ಟು ಮಕ್ಕಳು ಮಾತ್ರ ಎರಡನೇ ತರಗತಿಯ ಪಠ್ಯವನ್ನು ಓದುವ ಸಾಮರ್ಥ್ಯ ಬೆಳೆಸಿಕೊಂಡಿದ್ದಾರೆ. ಎಂಟನೇ ತರಗತಿಯ ಶೇ 31.2ರಷ್ಟು ವಿದ್ಯಾರ್ಥಿಗಳು ಮಾತ್ರ ಎರಡನೇ ತರಗತಿಯ ಪಠ್ಯವನ್ನು ಓದುತ್ತಾರೆ. ರಾಜ್ಯಮಟ್ಟದಲ್ಲಿ ಈ ಪ್ರಮಾಣ ಕ್ರಮವಾಗಿ ಶೇ 19 ಹಾಗೂ ಶೇ 48.8ರಷ್ಟಿದೆ. ಈ ಪ್ರಮಾಣವನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುವುದು. ಖಾಲಿ ಇರುವ ಶಿಕ್ಷಕರ ಹುದ್ದೆಗಳ ಪೈಕಿ ಮುಂದಿನ ದಿನಗಳಲ್ಲಿ 5,530 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

