ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವೆ ಉಲ್ಬಣಗೊಂಡಿರುವ ಸಂಘರ್ಷದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಪೂರೈಕೆಯಲ್ಲಿ ಅನಿಶ್ಚಿತತೆ ತಲೆದೋರಿದೆ ಹಾಗಾಗಿ, ತೈಲ ಬೆಲೆ ಏರಿಕೆಯ ಹಾದಿ ಹಿಡಿದಿದೆ.
ಇರಾನ್‌ನ ತೈಲ ನಿಕ್ಷೇಪ ಮತ್ತು ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿತ್ತು. ಇಸ್ರೇಲ್‌ನ ಈ ದಾಳಿಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಬೆಂಬಲ ಘೋಷಿಸಿದ ಬೆನ್ನಲ್ಲೇ ಗುರುವಾರ ಬ್ರೆಂಟ್ ಕಚ್ಚಾ ತೈಲದ ಬೆಲೆಯಲ್ಲಿ ಶೇ 5ರಷ್ಟು ಏರಿಕೆಯಾಗಿತ್ತು.
ಶುಕ್ರವಾರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇ 0.99ರಷ್ಟು ಏರಿಕೆಯಾಗಿದ್ದು, ಪ್ರತಿ ಬ್ಯಾರೆಲ್‌ಗೆ 78.39 ಡಾಲರ್ ತಲುಪಿದೆ. ಇದು ಒಂದು ತಿಂಗಳ ಹಿಂದಿನ ಗರಿಷ್ಠ ಮಟ್ಟವಾಗಿದೆ.
ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ ಒಂದೇ ವಾರದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಶೇ 9.4ರಷ್ಟು ಏರಿಕೆಯಾಗಿದೆ. 2022ರ ಅಕ್ಟೋಬರ್‌ನಲ್ಲಿ ಶೇ 11.3ರಷ್ಟು ಬೆಲೆ ಏರಿಕೆಯಾಗಿತ್ತು.
ಕಚ್ಚಾ ತೈಲ ಪೂರೈಕೆಯಲ್ಲಿ ಇರಾನ್ ಸಿಂಹಪಾಲು ಹೊಂದಿದ್ದು, ಯುದ್ಧದಲ್ಲಿ ನೇರವಾಗಿ ಭಾಗಿಯಾಗಿದೆ ಇದರಿಂದ ತೈಲ ಪೂರೈಕೆಯಲ್ಲಿ ಅನಿಶ್ಚಿತತೆ ಉಂಟಾಗಿದೆ. ಹಾಗಾಗಿ, ಬೆಲೆ ಏರಿಕೆಯಾಗುತ್ತಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

