ಬೆಂಗಳೂರು : ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾಮ ಪಂಚಾಯತಿಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.
ಗ್ರಾಮಸಭೆ ಸೇರುವ ಒಂದು ತಿಂಗಳು ಮೊದಲೇ ಜನವಸತಿ ಸಭೆ ಹಾಗೂ ವಾರ್ಡ್ ಸಭೆಗಳನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು ನಡೆಸಬೇಕು, ಒಂದು ವರ್ಷದಲ್ಲಿ ಎರಡು ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂಬ ಮಾಹಿತಿ ಮಾರ್ಗಸೂಚಿಗಳಲ್ಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಪ್ರತಿ ಆರ್ಥಿಕ ವರ್ಷದಲ್ಲಿ ಜನವರಿ 26, ಎಪ್ರಿಲ್ 24, ಆಗಸ್ಟ್ 15 ಮತ್ತು ಅಕ್ಟೋಬರ್ 2ರಂದು ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಸೂಚಿಸಲಾಗಿದೆ, ಒಂದು ವರ್ಷದಲ್ಲಿ ಒಂದು ವಿಶೇಷ ಮಹಿಳಾ ಗ್ರಾಮಸಭೆ ಮತ್ತು ಒಂದು ಮಕ್ಕಳ ಗ್ರಾಮಸಭೆಯನ್ನು ಆಯೋಜಿಸಬೇಕು. ಗ್ರಾಮ ಸಭೆಗಳನ್ನು ಆಯೋಜಿಸುವ ಸಂಬಂಧ ತಾಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳನ್ನೂ ಈ ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ ಎಂದು ತಿಳಿಸಿರುವ ಅವರು, ತಾಲೂಕು ಪಂಚಾಯತಿಗಳ ಕಾರ್ಯಾನಿರ್ವಾಹಕ ಅಧಿಕಾರಿಗಳು ತಮ್ಮ ಜವಾಬ್ದಾರಿಯಲ್ಲಿ ಲೋಪವಾಗದಂತೆ ಕಾರ್ಯ ನಿರ್ವಹಿಸಲು ಸೂಚಿಸಿದ್ದಾರೆ.
ಗ್ರಾಮಸಭೆಗಳನ್ನು ನಡೆಸುವಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜವಾಬ್ದಾರಿ ಅತಿ ಮುಖ್ಯವಾಗಿದ್ದು, ಜನವಸತಿ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳಲ್ಲಿ ಹೆಚ್ಚು ಮಂದಿ ಪಾಲ್ಗೊಳ್ಳುವಂತೆ ಅರಿವು ಮೂಡಿಸಬೇಕು, ಗ್ರಾಮ ಪಂಚಾಯತಿಗಳು ಸ್ಥಳೀಯ ಸರಕಾರಗಳಾಗಿ ಕಾರ್ಯ ನಿರ್ವಹಿಸುವ ಮೂಲಕ ಸರಕಾರದ ಕಲ್ಯಾಣ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ಬಡ ಮತ್ತು ಕಟ್ಟ ಕಡೆಯ ವ್ಯಕ್ತಿಗೂ ತಲುಪುವಂತೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಅವರು ನಿರ್ದೇಶನ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

