ಬೆಂಗಳೂರು: ಕೆರೆಗಳ ನಡುವೆ ಸಂಪರ್ಕ, ರಾಜಕಾಲುವೆ ಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣಕ್ಕೆ ತಡೆ, ರಾಜಕಾಲುವೆ ಪಕ್ಕದಲ್ಲಿ 300 ಕಿ.ಮೀ. ಉದ್ದ ರಸ್ತೆ ನಿರ್ಮಾಣ, ಚರಂಡಿಗಳ ಹೂಳೆತ್ತುವುದು, ಅಪಾಯಕಾರಿ, ಅನಧಿಕೃತ ಕಟ್ಟಗಳ ಸಮೀಕ್ಷೆ ಹಾಗೂ ತೆರವು, ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ, ಇವಿಷ್ಟು ಬೆಂಗಳೂರು ನಗರದಲ್ಲಿ ಅತಿವೃಷ್ಠಿಯಿಂದ ಉದ್ಭವಿಸುವ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಮತ್ತಿತರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಅತಿವೃಷ್ಠಿ ವಿಪತ್ತು ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಮತ್ತಿತರ ಅಧಿಕಾರಿಗಳ ಜತೆ ತುರ್ತುಸಭೆ ನಡೆಸಿದರು. ಸಭೆ ನಂತರ ಮಾಧ್ಯಮಗೋಷ್ಠಿ ನಡೆಸಿದ ಉಪಮುಖ್ಯಮಂತ್ರಿಗಳು ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಹಾಗೂ ಅಧಿಕಾರಿಗಳಿಗೆ ನೀಡಿರುವ ಸೂಚನೆಗಳ ಬಗ್ಗೆ ಮಾಹಿತಿ ನೀಡಿದರು.
ಇಂದು ಬೆಂಗಳೂರು ನಗರದಲ್ಲಿ ಅತಿವೃಷ್ಠಿ ಸಮಸ್ಯೆ ನಿವಾರಣೆಗಾಗಿ ಹಲವು ಪ್ರಮುಖ ತೀರ್ಮಾನ ಕೈಗೊಂಡಿದ್ದು, ಅಧಿಕಾರಿಗಳಿಗೆ ಕೆಲವು ನಿರ್ದೇಶನ ನೀಡಿದ್ದೇನೆ. ಎಲ್ಲೆಲ್ಲಿ ಮಳೆನೀರು ವಸತಿ ಪ್ರದೇಶಗಳಿಗೆ ನುಗ್ಗಿ ಸಮಸ್ಯೆ ಎದುರಾಗುತ್ತಿದೆಯೋ ಅಲ್ಲಿ ಪರಿಹಾರಕ್ಕೆ ಯೋಜನೆ ರೂಪಿಸಿ, ಅದಕ್ಕೆ ಅಗತ್ಯವಿರುವ ಹಣಕಾಸಿನ ಅಂದಾಜನ್ನು ನೀಡಲು ವಲಯವಾರು ಆಯುಕ್ತರು, ಮುಖ್ಯ ಎಂಜಿನಿಯರ್ ಗಳು ಹಾಗೂ ಮಳೆನೀರುಗಾಲುವೆ ನಿರ್ವಹಣೆ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಮಿತಿ ರಚಿಸಲಾಗಿದೆ. ಮುಂದಿನ ಒಂದು ವಾರದ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿದೆ ಈ ಅಧಿಕಾರಿಗಳಿಗೆ ಆಯಾ ಪ್ರದೇಶದಲ್ಲಿ ಎಷ್ಟು ಮಳೆ ಬಂದರೆ ಯಾವ ರೀತಿ ತೊಂದರೆಯಾಗುತ್ತದೆ ಎಂಬುದರ ಅರಿವಾಗಿದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

