ಬೆಂಗಳೂರು: ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೂ ಚಟುವಟಿಕೆ ನಡೆಸುವ ಸಲುವಾಗಿ ₹1 ಕೋಟಿವರೆಗೂ ಅನುದಾನ ಒದಗಿಸಲಾಗುತ್ತಿದೆ. ಕಾರ್ಯಕ್ರಮದ ಕುರಿತು ಪ್ರಸ್ತಾವ ಸಲ್ಲಿಸಿದರೆ, ಅದಕ್ಕೆ ಅಗತ್ಯ ಅನುದಾನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ನವೆಂಬರ್ 1ರಂದು ನಡೆಯಲಿರುವ ರಾಜ್ಯೋತ್ಸವ ಸಮಾರಂಭದಲ್ಲಿ 50 ಪುರುಷ ಹಾಗೂ ಮಹಿಳಾ ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕಲಾವಿದರಿಗೆ ನೀಡಲಾಗುವ ಮಾಶಾಸನದ ಮೊತ್ತವನ್ನು ಮುಂದಿನ ವರ್ಷದಿಂದ ₹3 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂದರು.
ರಾಜ್ಯದಲ್ಲಿ ವ್ಯಾಪಾರ, ವ್ಯವಹಾರ ಮಾಡುತ್ತಿದ್ದೀರಿ ಎಂದರೆ ಶೇಕಡ 60ರಷ್ಟು ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿರುವ ನ್ಯಾಯಾಲಯದ ಅಭಿಪ್ರಾಯ ಐತಿಹಾಸಿಕವಾದದ್ದು. ಶೇಕಡ 60ರಷ್ಟು ಕನ್ನಡ ಬಳಕೆ ಮಾಡಬೇಕೆಂಬುದನ್ನು ಪ್ರಶ್ನಿಸಿ ಕೆಲ ವಾಣಿಜ್ಯ ಸಂಸ್ಥೆಗಳು ಕೋರ್ಟ್ ಮೆಟ್ಟಿಲೇರಿದ್ದವು. ಆದರೆ ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಬೇಕು ಎಂದು ನ್ಯಾಯಾಲಯ ಹೇಳಿರುವುದು ನಿಜಕ್ಕೂ ಶ್ಲಾಘನೀಯ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಧರಣಿ ದೇವಿ ಮಾಲಗತ್ತಿ, ಸಂಗೀತ ಮತ್ತು ನೃತ್ಯ ಅಕಾಡೆಮಿ ಅಧ್ಯಕ್ಷೆ ಶುಭಾ ಧನಂಜಯ್ ಹಾಜರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

