ಬಳ್ಳಾರಿ: 2024ರ ಮುಂಗಾರು ಹಂಗಾಮಿನಲ್ಲಿ ಭತ್ತ, ರಾಗಿ, ಜೋಳ ಬೆಳೆದ ರೈತರಿಗೆ ಸಿಹಿಸುದ್ದಿಯೊಂದಿದೆ. ಬೆಂಬಲ ಬೆಲೆಯಲ್ಲಿ ರೈತರಿಂದ ಬೆಳೆಗಳನ್ನು ಖರೀದಿಸಲು ನೋಂದಣಿ ಆರಂಭವಾಗಿದೆ. ಬೆಳೆಗಳಿಗೆ ಬೆಂಬಲ ಬೆಲೆಗಳನ್ನು ಘೋಷಣೆ ಮಾಡಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ರೈತರು ಬೆಳೆಗಳನ್ನು ಮಾರಾಟ ಮಾಡಲು ಫ್ರೂಟ್ ತಂತ್ರಾಂಶದಲ್ಲಿ ನೋಂದಣಿ ಮಾಡಿಸಿರಬೇಕು, ಈ ನೋಂದಣಿ ಸಂಖ್ಯೆಯ ದಾಖಲೆ ಮೂಲಕವೇ ನೋಂದಾಯಿಸಲು ಅವಕಾಶವಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
ವಿವಿಧ ಜಿಲ್ಲೆಗಳಲ್ಲಿ ಪ್ರಸ್ತಕ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ರೈತರಿಂದ ಭತ್ತ, ರಾಗಿ, ಜೋಳ ಖರೀದಿಸಲು ನೋಂದಣಿ ಆರಂಭಿಸಲಾಗಿದೆ. ಬಳ್ಳಾರಿ ಜಿಲ್ಲೆಯಾದ್ಯಂತ 7 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ ನೀಡಿದ್ದಾರೆ.
2024-25ನೇ ಸಾಲಿನ ಮುಂಗಾರು ಋತುವಿನಲ್ಲಿ ಬೆಳೆದ ಬಿಳಿ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲು ತೀರ್ಮಾನಿಸಲಾಗಿದೆ. ಈ ಹಿಂದೆ ಕೇವಲ ರಾಗಿ, ಜೋಳ ಬೆಳೆಗಳನ್ನು ಮಾತ್ರ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಳೆಗಳ ನೋಂದಣಿ ಹಾಗೂ ಖರೀದಿ ಮಾಡಲಾಗುತ್ತಿತ್ತು. ಪ್ರಸ್ತುತ ಭತ್ತದ ಬೆಳೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಭತ್ತವನ್ನೂ ಸಹ ನೋಂದಣಿ ಮತ್ತು ಖರೀದಿ ಮಾಡಲಾಗುತ್ತಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಬಾರಿ 5 ಖರೀದಿ ಕೇಂದ್ರಗಳಲ್ಲಿ ಬೆಳೆ ಖರೀದಿ ಮಾಡಲಾಗುತ್ತಿತ್ತು. ಆದರೆ ಈ ಬಾರಿ ರೈತರ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ ಎರಡು ಕೇಂದ್ರಗಳನ್ನು ತೆರೆಯಲಾಗಿದೆ. ಒಟ್ಟು 7 ಕೇಂದ್ರಗಳಲ್ಲಿ ಖರೀದಿ ನಡೆಯಲಿದೆ.
ರೈತರಿಂದ ಖರೀದಿ ಮಾಡುವ ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ ರೂ. 2,300, ಮತ್ತು ಗ್ರೇಡ್-ಎ ಭತ್ತಕ್ಕೆ ರೂ. 2,320. ರಾಗಿ ಬೆಳೆಗೆ ರೂ. 4,290, ಹೈಬ್ರೀಡ್ ಬಿಳಿ ಜೋಳಕ್ಕೆ ರೂ. 3,371, ಮಾಲ್ದಂಡಿ ಬಿಳಿ ಜೋಳಕ್ಕೆ ರೂ. 3,421 ಬೆಂಬಲ ಬೆಲೆ ನಿಗದಿಯಾಗಿದ್ದು, ರೈತರು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತಮ್ಮ ಬೆಳೆಗಳನ್ನು ಮಾರಾಟ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ, ಬೆಂಗಳೂರು ಇವರು ಖರೀದಿಸುವ ಏಜೆನ್ಸಿಯಾಗಿರುತ್ತಾರೆ. ರೈತರು ಫ್ರೂಟ್ ತಂತ್ರಾಂಶದ ದಾಖಲೆ ಮೂಲಕ ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ಹೆಸರು ನೋಂದಾಯಿಸಲು ಅವಕಾಶವಿರುತ್ತದೆ.
ಭತ್ತ ಬೆಳೆ ನೋಂದಾಯಿಸಲು ಡಿಸೆಂರ್ 31ರ ತನಕ ಅವಕಾಶವಿದೆ. ಭತ್ತ ಖರೀದಿ ಕೇಂದ್ರದಲ್ಲಿ 2025ರ ಜನವರಿ 1 ರಿಂದ ಮಾರ್ಚ್ 31ರ ವರೆಗೆ ಖರೀದಿಸಲಾಗುತ್ತದೆ. ರಾಗಿ ಮತ್ತು ಜೋಳ ನೋಂದಣಿಯು ಡಿಸೆಂಬರ್ 1 ರಿಂದ ಪ್ರಾರಂಭಗೊಳ್ಳುತ್ತದೆ ಹಾಗೂ ರಾಗಿ ಮತ್ತು ಜೋಳ ಬೆಳೆಯನ್ನು ಜನವರಿ 1ರಿಂದ ಮಾರ್ಚ್ 31ರ ವರೆಗೆ ಖರೀದಿಸಲಾಗುತ್ತದೆ.
ರೈತರ ಹೆಸರು ಹೇಳಿ, ಅಕ್ರಮವಾಗಿ ಬೆಳೆ ಖರೀದಿಗೆ ಹೆಸರು ನೋಂದಾಯಿಸಿಕೊಂಡು ಮಾರಾಟ ಮಾಡಿದರೆ ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಬೆಳೆ ಮಾರಾಟ ಸಂದರ್ಭದಲ್ಲಿ ಗೋಣಿ ಚೀಲ ವ್ಯವಸ್ಥೆಯನ್ನು ಖರೀದಿ ಸಂಸ್ಥೆ ಅಥವಾ ಏಜೆನ್ಸಿ ಅವರೇ ಮಾಡತಕ್ಕದ್ದು, ಉಗ್ರಾಣ ಸಮಸ್ಯೆ, ಕಳಪೆ ನಿರ್ವಹಣೆ ಸೇರಿದಂತೆ ಇನ್ನಿತರೆ ದೂರುಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿ ಮತ್ತು ಏಜೆನ್ಸಿ ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಅಧಿಕಾರಿಗಳು ಹಾಗೂ ಏಜೆನ್ಸಿಯವರು ರೈತಪರ ಕಾಳಜಿಯಿಂದ ಕಾರ್ಯ ನಿರ್ವಹಿಸಬೇಕು. ನಿಯಮಬದ್ಧವಾಗಿ ಕಾರ್ಯನಿರ್ವಹಿಸದೇ ಹೋದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಖರೀದಿ ಕೇಂದ್ರಗಳಲ್ಲಿ ಚೆಕ್‌ಪೋಸ್ಟ್ ತೆರೆಯಲಾಗುತ್ತದೆ. ಬೆಳೆಗಳ ಖರೀದಿ ಹಾಗೂ ನೋಂದಣಿ ಪ್ರಕ್ರಿಯೆಯು ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದ್ದು, ಯಾವುದೇ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡದೆ ಬೆಳೆಗಳ ನೋಂದಣಿ ಹಾಗೂ ಖರೀದಿ ಕಾರ್ಯ ಯಶಸ್ವಿಯಾಗಿ ನಡೆಯಬೇಕು ಎಂದು ಸೂಚನೆ ಕೊಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





