ಬೀದರ್ : ಪ್ರಸಕ್ತ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ 17,460 ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಸರಕಾರವು 13.76 ಕೋಟಿ ರೂ.ಗಳ ಪೈಕಿ 10 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿದ್ದು ರೈತರ ಖಾತೆಗಳಿಗೆ ನೇರವಾಗಿ ಡಿಬಿಟಿ ಮೂಲಕ ಜಮೆಯಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಸಾಕಷ್ಟು ಬೆಳೆ ಹಾನಿಯಾಗಿದೆ. ಸರಕಾರವು 10 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿದ್ದು ಇನ್ನೂ 3.76 ಕೋಟಿ ರೂ. ಬರಲಿದೆ. ಜಿಲ್ಲೆಯ 15 ಸಾವಿರ ರೈತರ ಖಾತೆಗಳಿಗೆ ಮುಂಗಾರು ಬೆಳೆ ಪರಿಹಾರ ನೇರವಾಗಿ ಜಮೆಯಾಗಲಿದೆಯೆಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಸ್ಥರಿಗೆ 2 ಸಾವಿರ ರೂ. ಮಾಸಿಕ ವೇತನ ಸರಿಯಾಗಿ ಜಮೆ ಆಗುತ್ತಿರುವ ಬಗ್ಗೆ ಕಂದಾಯ ಅಧಿಕಾರಿಗಳು ಸೂಕ್ತ ಗಮನ ಇಡಬೇಕು. ಅವರ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಶೈಕ್ಷಣಿಕ ಫೀ ಇಲಾಖೆಯು ಕಟ್ಟಬೇಕು. ಸಾಮಾಜಿಕ ಬದ್ಧತೆ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿಗಳು ಸೂಕ್ತ ವರದಿ ನೀಡುವಂತೆ ಸಚಿವರು ಸೂಚಿಸಿದರು.
ಯಾವುದೇ ರೈತರಿಗೆ ಸಾಲ ಮರು ಪಾವತಿಸುವಂತೆ ಬ್ಯಾಂಕಗಳು ಒತ್ತಡ ಹೇರಬಾರದು. ರೈತರಿಗೆ ತೊಂದರೆಯಾಗದಂತೆ ಸುತ್ತೋಲೆ ಹೊರಡಿಸಬೇಕು. ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ರೈತ ಅಭಿವೃದ್ಧಿ ಕಾರ್ಯಕ್ರಮಗಳು ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಶ್ರಮಿಸಬೇಕೆಂದರು.
ಈ ಸಭೆಯಲ್ಲಿ ಯುವಜನ ಸೇವಾ ಕ್ರೀಡಾ ಇಲಾಖೆಯ ಕಾರ್ಯದರ್ಶಿ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಂದೀಪ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹೆರೋಜ್ ಖಾನ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಅಮೃತರಾವ್ ಚಿಮಕೂಡ, ಬೀದರ್ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಬಸವಕಲ್ಯಾಣ ಶಾಸಕರಾದ ಶರಣು ಸಲಗರ, ವಿಧಾನ ಪರಿಷತ್ತಿನ ಸದಸ್ಯರಾದ ಭೀಮರಾವ್ ಪಾಟೀಲ್, ಡಾ.ಚಂದ್ರಶೇಖರ ಪಾಟೀಲ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಾನತಿ ಎಂ.ಎಂ., ಬಸವಕಲ್ಯಾಣ ಸಹಾಯಕ ಆಯುಕ್ತರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





