Breaking News

ದೇಶದಲ್ಲೇ ಅಭಿವೃದ್ದಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ: ಸಿಎಂ ಸಿದ್ದರಾಮಯ್ಯ

ತುಮಕೂರು: ದೇಶದಲ್ಲೇ ಅಭಿವೃದ್ಧಿ ವಿಷಯದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಎಲ್ಲ ರಾಜ್ಯಗಳಿಗಿಂತ ಕರ್ನಾಟಕ ಪ್ರಗತಿಯಲ್ಲಿ ಮುಂಚೂಣಿ ಕಾಯ್ದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.
ದೇಶದ ಒಟ್ಟಾರೆ ಜಿಡಿಪಿ 8.2ರಷ್ಟು ಬೆಳವಣಿಗೆ ಸಾಧಿಸಿದ್ದರೆ, ಕರ್ನಾಟಕದ ಜಿಡಿಪಿ 10.2ಕ್ಕೆ ಹೆಚ್ಚಳವಾಗಿದೆ.
ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ), ಕೇಂದ್ರಕ್ಕೆ ತೆರಿಗೆ ಪಾವತಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ರಾಜ್ಯ ಎರಡನೇ ಸ್ಥಾನದಲ್ಲಿದೆ. ಅಭಿವೃದ್ಧಿಯಲ್ಲಿ ಇತರೆ ಎಲ್ಲ ರಾಜ್ಯಗಳಿಗಿಂತ ನಾವು ಮುಂಚೂಣಿಯಲ್ಲಿ ಇದ್ದೇವೆ. ಯಾರು ಬೇಕಾದರೂ ಬಂದು ಪರಿಶೀಲಿಸಲಿ. ತಪ್ಪು ಹೇಳುತ್ತಿದ್ದೇವೆ ಎಂಬ ಬಗ್ಗೆ ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.
ನಗರದಲ್ಲಿ ಜಿಲ್ಲಾ ಆಡಳಿತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದರು.
ಒಕ್ಕೂಟ ವ್ಯವಸ್ಥೆಯಲ್ಲಿ ಪರಸ್ಪರ ಹೊಂದಾಣಿಕೆಯಿಂದ ಆಡಳಿತ ನಡೆಸಬೇಕಾಗುತ್ತದೆ. ದೇಶ ಅಭಿವೃದ್ಧಿ ಆಗಬೇಕಾದರೆ ಪ್ರತಿ ರಾಜ್ಯ, ಪ್ರತಿ ಹಳ್ಳಿಯೂ ಪ್ರಗತಿ ಕಾಣಬೇಕಾಗುತ್ತದೆ. ಅಭಿವೃದ್ಧಿ ದೃಷ್ಟಿಯಿಂದ ಎಲ್ಲರಿಗೂ ಅವಕಾಶ ಒದಗಿಸಿಕೊಡಬೇಕು. ಅದಕ್ಕಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡಿ ಜನಸಾಮಾನ್ಯರಿಗೆ ಸಾಮಾಜಿಕ ಹಾಗೂ ಆರ್ಥಿಕ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳಲಾಗಿದೆ ಎಂದರು.
ಸಮ ಸಮಾಜ ನಿರ್ಮಾಣದ ಉದ್ದೇಶವನ್ನು ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದರೆ, ಕೆಲವರು ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಟೀಕೆ ಮಾಡುತ್ತಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಅನುದಾನವಿಲ್ಲದೆ ಸ್ಥಗಿತಗೊಂಡಿವೆ ಎನ್ನುತ್ತಾರೆ. ಜಿಲ್ಲೆಯೊಂದರಲ್ಲೇ ವಿವಿಧ ರೂಪದಲ್ಲಿ 1.50 ಲಕ್ಷ ಜನರಿಗೆ ಸವಲತ್ತು ವಿತರಿಸಿರುವುದು ಅಭಿವೃದ್ಧಿಯಲ್ಲವೇ ಎಂದು ಪ್ರಶ್ನಿಸಿದರು.
ರಾಜ್ಯ ಬಜೆಟ್ ಗಾತ್ರ ₹3.71 ಲಕ್ಷ ಕೋಟಿ. ಅದರಲ್ಲಿ ₹1.20 ಲಕ್ಷ ಕೋಟಿ ಹಣವನ್ನು ಅಭಿವೃದ್ಧಿಗೆ ಮೀಸಲಿಡಲಾಗಿದೆ. ₹52,900 ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಲಾಗಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಅಭಿವೃದ್ಧಿಗೆ ಹೆಚ್ಚು ಅನುದಾನ ಖರ್ಚು ಮಾಡಲಾಗಿದೆ. ಆದರೂ ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ ಎನ್ನುತ್ತಾರೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಎಸ್‌ಇಪಿ, ಟಿಎಸ್‌ಪಿ ಕಾಯ್ದೆ ಜಾರಿಗೆ ತರಲಾಗಿದೆ. ಈ ಯೋಜನೆಯಲ್ಲಿ ಪರಿಶಿಷ್ಟರಿಗೆ ₹39,214 ಕೋಟಿ ಖರ್ಚು ಮಾಡಲಾಗುತ್ತಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಹೊರತುಪಡಿಸಿದರೆ ಬೇರೆ ಯಾವ ರಾಜ್ಯದಲ್ಲೂ ಪರಿಶಿಷ್ಟರಿಗೆ ಪ್ರತ್ಯೇಕ ಅನುದಾನ ಮೀಟಲಿಟ್ಟಿಲ್ಲ. ಹಾಗಾದರೆ ಕೇಂದ್ರ ಸರ್ಕಾರ ಏಕೆ ಪರಿಶಿಷ್ಟರಿಗೆ ಹಣ ಮೀಸಲಿಡುವ ಪ್ರಯತ್ನ ಮಾಡಲಿಲ್ಲ ಎಂದು ಕೇಳಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಐದು ಗ್ಯಾರಂಟಿಗಳನ್ನು ಜಾರಿ ಮಾಡುವ ಮೂಲಕ ನುಡಿದಂತೆ ನಡೆದಿದ್ದೇವೆ. ನಮ್ಮ ಶಕ್ತಿ ಏನೆಂದು ತೋರಿಸಿಕೊಟ್ಟಿದ್ದೇವೆ. ನಮ್ಮ ಗ್ಯಾರಂಟಿಗಳನ್ನು ಬಿಜೆಪಿ ಸರ್ಕಾರ ಇರುವ ರಾಜ್ಯಗಳು ಕಾಪಿ ಮಾಡಿವೆ. ಜಿಲ್ಲೆಯಲ್ಲಿ ಸವಲತ್ತು ವಿತರಣೆ ಮಾಡಿದಂತೆ ಎಲ್ಲ ಜಿಲ್ಲೆಗಳಲ್ಲೂ ಜನ ಕಲ್ಯಾಣ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗಲಾಗುವುದು ಎಂದು ಹೇಳಿದರು.
ಎತ್ತಿನಹೊಳೆ ನೀರಾವರಿ ಯೋಜನೆಯನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಪೂರ್ಣಗೊಳಿಸಲಾಗುವುದು. ಕೊರಟಗೆರೆ ತಾಲ್ಲೂಕಿನ ಬಿಳಿಗೊಂಡ್ಲು ಬಳಿ ಜಲ ಸಂಗ್ರಹಾಗಾರ ನಿರ್ಮಿಸುವ ಸಂಬಂಧ ಸ್ಥಳಕ್ಕೆ ಭೇಟಿನೀಡಿ ಸಮಸ್ಯೆ ಪರಿಹರಿಸಲಾಗುವುದು ಎಂದು ತಿಳಿಸಿದರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ, ಅನ್ನಭಾಗ್ಯ ಯೋಜನೆ ಜಾರಿ ಮಾಡಿದ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಿಂದ ಹಣ ತಂದು ಕೊಡುತ್ತಿಲ್ಲ ಎಂದು ಟೀಕಿಸಿದರು. ಆದರೆ ಬಿಜೆಪಿ ಮುಖ್ಯಮಂತ್ರಿ ಇರುವ ರಾಜ್ಯಗಳಲ್ಲಿ ಏಕೆ ಜಾರಿ ಮಾಡಲಿಲ್ಲ. ಅವರೇನು ಅವರ ಮನೆಯಿಂದ ಹಣ ತಂದು ಕೊಡುತ್ತಿದ್ದರೆ ಎಂದು ಪ್ರಶ್ನಿಸಿದರು.
ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ಬಾಬು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ, ಎಂ.ಟಿ.ಕೃಷ್ಣಪ್ಪ, ಕೆ.ಷಡಕ್ಷರಿ, ಎಚ್.ವಿ.ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ್ ಎಂ.ಗೌಡ, ಆರ್.ರಾಜೇಂದ್ರ, ಡಿ.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ, ಎಸ್ಪಿ ಕೆ.ವಿ.ಅಶೋಕ್ ಇತರರು ಉಪಸ್ಥಿತರಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *