ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತರಬೇಕು, ಡಾ. ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ರೈತ ನಾಯಕ ಜಗಜಿತ್ ಸಿಂಗ್ ದಲೈವಾಲ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯತ್ತಿರುವ ಉಪವಾಸ ಬೆಂಬಲಿಸಿ ರಾಜ್ಯದಲ್ಲೂ ರೈತ ಸಂಘಟನೆಗಳು ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಿವೆ.
ಕೇಂದ್ರ ಸರ್ಕಾರ ಚಳವಳಿ ನಿರತ ಮುಖಂಡರ ಜೊತೆ ಕೂಡಲೇ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು’ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.
ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ರೈತರ ಸಾಲವನ್ನು ಶೇ 16ಕ್ಕೆ ಏರಿಕೆ ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಆದರೆ ಈಗ ನಬಾರ್ಡ್ ನೆರವಿನಲ್ಲಿ ಸಹಕಾರ ಸಂಘಗಳ ಮೂಲಕ ರೈತರಿಗೆ ಕೊಡುತ್ತಿದ್ದ ಬಡ್ಡಿ ರಹಿತ ಸಾಲಕ್ಕೆ ಕಡಿವಾಣ ಹಾಕಲು ಶೇಕಡ 50ರಷ್ಟು ಅನುದಾನ ಕಡಿತ ಮಾಡಿದ್ದಾರೆ. ಇದು ರೈತರಿಗೆ ಸಹಕಾರ ಸಂಘಗಳಲ್ಲಿ ನೀಡುತ್ತಿದ್ದ ಬಡ್ಡಿ ರಹಿತ ಕೃಷಿ ಸಾಲ ತಪ್ಪಿಸುವ ಹುನ್ನಾರ. ಕೇಂದ್ರ ಸರ್ಕಾರ ಕಡಿತ ಮಾಡಿರುವ ಶೇ 50ರಷ್ಟು ಅನುದಾನವನ್ನು ರಾಜ್ಯದ ಸಂಸದರು ಒತ್ತಡ ಹೇರಿ ಬಿಡುಗಡೆ ಮಾಡಿಸಬೇಕು ಎಂದು ಒತ್ತಾಯಿಸಿದರು.
ಉಪವಾಸ ಸತ್ಯಾಗ್ರಹದಲ್ಲಿ ರೈತ ಮುಖಂಡರಾದ ಬಸವರಾಜ್ ಪಾಟೀಲ್, ತುಮಕೂರು ಶಿವಕುಮಾರ್, ಅತ್ತಿಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ರಮೇಶ್ ಹೂಗಾರ್, ರಾಜು ಗುಂದಗಿ, ರೇವಣ್ಣ, ಮಾರ್ಬಳ್ಳಿ ನೀಲಕಂಠಪ್ಪ, ವರಕೋಡು ನಾಗೇಶ್, ಸೂರಿ, ಹೆಗ್ಗೂರು ರಂಗರಾಜು, ಶೇಖರಪ್ಪ, ಗಿರೀಶ, ಕಮಲಮ್ಮ, ಅಂಬಳೆ ಮಂಜುನಾಥ್, ಸತೀಶ್, ಪ್ರಕಾಶ್ ಪಾಲ್ಗೊಂಡಿದ್ದರು.
ಎಎಪಿ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ನೇತೃತ್ವದಲ್ಲಿ ಪಕ್ಷದ ಪದಾಧಿಕಾರಿಗಳು ಪಾಲ್ಗೊಂಡು ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





