ಬೀದರ್: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಅನುದಾನ ಬಿಡುಗಡೆಗೊಳಿಸುವುದನ್ನು ಸ್ಥಗಿತಗೊಳಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾದಿಂದ ನಗರದಲ್ಲಿ ಇಂದು ಪ್ರತಿಭಟನಾ ರ್‍ಯಾಲಿ ನಡೆಸಲಾಯಿತು.
ನಗರದ ಗಣೇಶ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬಿಜೆಪಿ ಕಾರ್ಯಕರ್ತರು ರ್‍ಯಾಲಿ ನಡೆಸಿದರು.
ರ್‍ಯಾಲಿಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿದರು. ರಾಜ್ಯಪಾಲರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.
2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ವಿವಿಧ ನಿಗಮಗಳಿಗೆ ಅನುದಾನ ನೀಡುತ್ತಿಲ್ಲ. ನೆಪಮಾತ್ರಕ್ಕೆ ಬಜೆಟ್‌ನಲ್ಲಿ ಘೋಷಿಸಲಾಗಿದೆ. ವಾಸ್ತವಕ್ಕೂ ಬಜೆಟ್‌ನಲ್ಲಿ ತಿಳಿಸಿರುವುದಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಆರೋಪಿಸಿದರು.
ಹಿಂದುಳಿದ, ಅತಿ ಹಿಂದುಳಿದ, ಅಲೆಮಾರಿ ಸಮುದಾಯಗಳು ಹಿಂದಿನ ಸರ್ಕಾರದಲ್ಲಿ ಪಡೆಯುತ್ತಿದ್ದ ಸ್ವಯಂ ಉದ್ಯೋಗ ಯೋಜನೆ, ವಿದ್ಯಾರ್ಥಿ ಅರಿವು ಯೋಜನೆ, ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ ಕೊರೆಸುವ ಯೋಜನೆ ಸ್ಥಗಿತಗೊಂಡಿದೆ. ಹಿಂದುಳಿದ ವರ್ಗಗಳಿಗೆ ಮೀಸಲಿಡುತ್ತಿದ್ದ ಅನುದಾನವೆಲ್ಲವೂ ಐದು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಲಾಗುತ್ತಿದೆ ಎಂದು ದೂರಿದರು.
ರಾಜಕೀಯ ಸ್ವಾರ್ಥಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಹಿಂದ ಮಂತ್ರ ಜಪಿಸುತ್ತಾರೆ. ಆದರೆ, ಆ ಸಮುದಾಯಗಳ ಕಲ್ಯಾಣಕ್ಕೆ ಕಲ್ಲು ಹಾಕುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಜೆಟ್‌ನಲ್ಲಿ ₹546 ಕೋಟಿ ಹಿಂದುಳಿದ ವರ್ಗಗಳ ಕಲ್ಯಾಣ ನಿಗಮಗಳಿಗೆ ಬಿಡುಗಡೆಯಾದರೆ, ಹಾಲಿ ಕಾಂಗ್ರೆಸ್ ಸರ್ಕಾರ ₹170 ಕೋಟಿ ಅನುದಾನ ಬಿಡುಗಡೆಗೊಳಿಸಿದೆ. 2024-25ನೇ ಸಾಲಿನ ಬಜೆಟ್‌ನಲ್ಲಿ ₹1,600 ಕೋಟಿ ಅನುದಾನ ಘೋಷಿಸಲಾಗಿತ್ತು. ಆದರೆ, ₹347 ಕೋಟಿ ಬಿಡುಗಡೆಗೊಳಿಸಲಾಗಿದೆ. ಬಜೆಟ್‌ನಲ್ಲಿ ಘೋಷಿಸುವ ಅನುದಾನ ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಅರವಿಂದ ಮುತ್ಯಾ, ಕಲಬುರಗಿ ವಿಭಾಗೀಯ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್, ಬೀದರ್ ನಗರ ಮಂಡಲ ಘಟಕದ ಅಧ್ಯಕ್ಷ ಶಶಿಧರ ಹೊಸಳ್ಳಿ, ಗುರುನಾಥ ಜ್ಯಾಂತಿಕರ್, ಪೀರಪ್ಪ ಔರಾದೆ, ಗೋಪಾಲರೆಡ್ಡಿ, ಸುಭಾಷ ಮಡಿವಾಳ, ರಾಜಕುಮಾರ, ಶ್ರೀನಿವಾಸ ಚೌಧರಿ, ಈರಣ್ಣ ಹಡಪದ, ವಿಜಯಕುಮಾರ ಹೆಗ್ಗೆ, ರೋಶನ್ ವರ್ಮಾ, ರವಿ ಮತ್ತಿತರರು ಪಾಲ್ಗೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





