Breaking News

ಮುಂದುವರೆದ ಸಮುದಾಯವನ್ನು 2ಎ ಮೀಸಲಾತಿಗೆ ಸೇರಿಸಬೇಡಿ: ರಾಜ್ಯ ಹಿಂದುಳಿದ ಒಕ್ಕೂಟದಿಂದ ಪ್ರತಿಭಟನೆ

ಬೆಳಗಾವಿ: ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಮುಂದುವರಿದ ಯಾವುದೇ ಸಮುದಾಯವನ್ನು ಪ್ರವರ್ಗ ‘2ಎ’ ಮೀಸಲಾತಿ ಪಟ್ಟಿಯಲ್ಲಿ ಸೇರಿಸಬಾರದು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದವರು ಇಲ್ಲಿನ ಸುವರ್ಣ ವಿಧಾನಸೌಧ ಬಳಿ ಇರುವ ವೇದಿಕೆಯಲ್ಲಿ ಬುಧವಾರ ಬೃಹತ್‌ ಪ್ರತಿಭಟನೆ ನಡೆಸಿದರು.
ಸದ್ಯ ಪ್ರವರ್ಗ ‘3ಬಿ’ ಅಡಿ ಮೀಸಲಾತಿ ಪಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಸಮುದಾಯದವರು ತಮ್ಮನ್ನು ‘2ಎ’ಗೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿ ಹೋರಾಟ ಮಾಡುತ್ತಿದ್ದಾರೆ. ಶೈಕ್ಷಣಿಕ, ಸಾಮಾಜಿಕ ಆರ್ಥಿಕ ಮತ್ತು ರಾಜಕೀಯವಾಗಿ ಮುಂದುವರಿದ ಸಮಾಜ ಇದಾಗಿದೆ. ಇದನ್ನು ‘2ಎ’ಗೆ ಸೇರಿಸಿದರೆ, ಈಗಾಗಲೇ ಈ ಪಟ್ಟಿಯಲ್ಲಿರುವ ಅಗಸ, ಸವಿತಾ, ಈಡಿಗ, ಕುರುಬ, ದೇವಾಂಗ, ನೇಕಾರ, ಕುಂಬಾರ, ಕಮ್ಮಾರ, ಮಾಳಿ, ಧರ್ಜಿ, ಕ್ಷತ್ರೀ ಮತ್ತಿತರ ಹಿಂದುಳಿದ ಜಾತಿಗಳು ಮೀಸಲಾತಿಯಿಂದ ವಂಚಿತವಾಗಲಿವೆ’ ಎಂದು ದೂರಿದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಈಗಾಗಲೇ ಸ್ವೀಕೃತವಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ತಕ್ಷಣವೇ ಬಿಡುಗಡೆಗೊಳಿಸಿ ಅನುಷ್ಠಾನಗೊಳಿಸಬೇಕು. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ₹2,500 ಕೋಟಿ ಹಣ ಹೆಚ್ಚುವರಿಯಾಗಿ ಒದಗಿಸಬೇಕು. ವಿವಿಧ ನಿಗಮ-ಮಂಡಳಿಗಳಲ್ಲಿ ಹಿಂದುಳಿದ ವರ್ಗದವರಿಗೆ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ನಿರ್ದೇಶಕ ಸ್ಥಾನ ಒಡಬೇಕು. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಪುನರ್‌ರಚಿಸಬೇಕು ‘ ಎಂದು ಒತ್ತಾಯಿಸಿದರು.
ತಮ್ಮ ಬೇಡಿಕೆ ಈಡೇರಿಸುವಂತೆ ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರಿಗೆ ಮನವಿ ಸಲ್ಲಿಸಿದರು.
ನಂತರ ಮಹದೇವಪ್ಪ ಮಾತನಾಡಿ, ‘ಮೀಸಲಾತಿ ಕೇಳುವುದು ಭಿಕ್ಷೆಯಲ್ಲ. ಸಮಾಜದಲ್ಲಿ ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಇರಲಿದೆ. ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಡಿ ನಿಮ್ಮ ಬೇಡಿಕೆಗಳನ್ನು ಪರಿಶೀಲಿಸಿ, ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು‌. ನಿಮಗೆ ನ್ಯಾಯ ಒದಗಿಸಲಾಗುವುದು’ ಎಂದು ಭರವಸೆ ಕೊಟ್ಟರು.
ನಿಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ’ ಎಂದು ತಂಗಡಗಿ ಹೇಳಿದರು.
ಶಾಸಕ ಆಸಿಫ್‌ ಸೇಠ್‌, ಬುಡಾ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಮುಖಂಡರಾದ ಕೆ.ಎಂ.ರಾಮಚಂದ್ರಪ್ಪ, ಎಣ್ಣೆಗೆರೆ ವೆಂಕಟರಾಮಯ್ಯ, ಜಿ.ಡಿ.ಗೋಪಾಲ, ಮಡ್ಡೆಪ್ಪ ತೋಳನ್ನವರ ಇತರರಿದ್ದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *