ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾದ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಇದೇ ಡಿಸೆಂಬರ್ 22 ರಂದು ಲೋಕಾರ್ಪಣೆ ಮಾಡಲಾಗುತ್ತಿದ್ದು, ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ಇಂದು ನೂತನ ಜಯದೇವ ಆಸ್ಪತ್ರೆಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರದೇಶದ ಸಚಿವರು-ಶಾಸಕರು ಅಗಮಿಸಲಿದ್ದು, ಅಂದಾಜು 2,500 ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ ಎಂದರು.
ನೂತನ ಆಸ್ಪತ್ರೆಯ ಸಾಮರ್ಥ್ಯಕ್ಕೆ ತಕ್ಕಂತೆ ಈಗಿರುವ 10 ಹೃದ್ರೋಗ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ 21 ವೈದ್ಯರು, 120 ಸ್ಟಾಫ್ ನರ್ಸ್ ಸೇರಿದಂತೆ ಇತರೆ ಸಿಬ್ಬಂದಿಗಳ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಅದರಂತೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದರು.
ನೂತನ ಜಯದೇವ ಆಸ್ಪತ್ರೆಯಲ್ಲಿ 3 ಕ್ಯಾತಲ್ಯಾಬ್, ಮೂರು ಅಪರೇಷನ್ ಥಿಯೇಟರ್, ಒಂದು ಹೈಬ್ರಿಡ್ ಓ.ಟಿ. ಇರಲಿದೆ. ಎಕ್ಸ್ರೇ, ಇ.ಎಂ.ಆರ್.ಐ., ಬ್ಲಡ್ ಬ್ಯಾಂಕ್ ಸೇವೆ ಲಭ್ಯವಿರಲಿದೆ. 105 ಐ.ಸಿ.ಸಿ.ಯು ಬೆಡ್, 120 ಜನರಲ್ ಬೆಡ್ ಸೇರಿದಂತೆ ಒಟ್ಟಾರೆ 371 ಹಾಸಿಗೆ ಸಾಮರ್ಥ್ಯ ಇದ್ದು, ಅತ್ಯಾಧುನಿಕ ಸೌಲಭ್ಯದೊಂದಿಗೆ ಬಿ.ಪಿ.ಎಲ್ ರೋಗಿಗಳಿಗೆ ಉಚಿತ ಮತ್ತು ಎ.ಪಿ.ಎಲ್. ರೋಗಿಗಳಿಗೆ ಶೇ.30ರ ರಿಯಾಯಿತಿ ದರದೊಂದಿಗೆ ಚಿಕಿತ್ಸೆ ಇಲ್ಲಿ ಸಿಗಲಿದೆ ಎಂದರು.
ಬೆಂಗಳೂರು, ಮೈಸೂರು ಬಿಟ್ಟರೆ ರಾಜ್ಯದಲ್ಲಿ ಮೂರನೇ ಸ್ವಂತ ಕಟ್ಟಡ ಕಲಬುರಗಿಯಲ್ಲಿ ಆಸ್ಪತ್ರೆ ಹೊಂದಲಿದ್ದು, ಬೆಂಗಳೂರು ಬಿಟ್ಟರೆ ಕಲಬುರಗಿ ಶಾಖಾ ಆಸ್ಪತ್ರೆಯಲ್ಲಿ ವಸ್ಕುಲರ್ ಸರ್ಜರಿ ಸೇವೆ ಸಹ ನೀಡಲು ಉದ್ದೇಶಿಸಲಾಗಿದೆ. ಇದು ಕಲ್ಯಾಣ ಕರ್ನಾಟಕ ಭಾಗದಲ್ಲಿಯೆ ಮೊದಲನೇಯದಾಗಲಿದೆ ಎಂದ ಅವರು ನೂತನ ಆಸ್ಪತ್ರೆಯಲ್ಲಿ ನೀರಿನ ಕೊರತೆ ಎದುರಾಗದಂತೆ 7 ಲಕ್ಷ ಲೀ. ನೀರು ಸಾಮರ್ಥ್ಯ ಟ್ಯಾಂಕ್ ಸ್ಥಾಪಿಸಿದ್ದು, 11ಕೆ.ವಿ. ವಿದ್ಯುತ್ ಕೇಂದ್ರವನ್ನು 33ಕೆ.ವಿ.ಗೆ ಮೇಲ್ದರ್ಜೇಗೇರಿಸಲಾಗಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

