ದಾವಣಗೆರೆ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿ ಡಿ.24ರ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಅರೆಬೆತ್ತಲೆ ಮೆರವಣಿಗೆ ನಡೆಸಿದರು.
ಅಂಬೇಡ್ಕರ್ ವೃತ್ತದಿಂದ ಉಪ ವಿಭಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸಂವಿಧಾನ ಕುರಿತ ಚರ್ಚೆಯಲ್ಲಿ ಅಮಿತ್ ಶಾ ಅವರು, ಈಚೆಗೆ ಅಂಬೇಡ್ಕರ್ ಎಂದು ಹೇಳುವುದು ಫ್ಯಾಷನ್ ಆಗಿದೆ. ಅಂಬೇಡ್ಕರ್ ಎನ್ನುವ ಬದಲಿಗೆ ದೇವರ ಜಪ ಮಾಡಿದರೆ ಏಳು ಜನ್ಮಕ್ಕೆ ಆಗುವಷ್ಟು ಪುಣ್ಯ ದೊರೆಯುತ್ತದೆ ಎಂದು ಹೇಳುವ ಮೂಲಕ ಭಾರತ ರತ್ನ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಘೋರ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಪರಿಶಿಷ್ಟ ಜಾತಿ ದೌರ್ಜನ್ಯ ತಡೆ ಕಾಯ್ದೆ ಪ್ರಕಾರ ಸುಮುಟೋ ಪ್ರಕರಣ ದಾಖಲಿಸಬೇಕು. ಕೂಡಲೇ ಲೋಕಸಭಾ ಸದಸ್ಯತ್ವ ರದ್ದುಪಡಿಸುವ ಜೊತೆಗೆ ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಸಂಚಾಲಕ ರಾಘವೇಂದ್ರ ಕಡೇಮನಿ, ಕೆಟಿಜೆ ನಗರ ರವಿ, ಮಲ್ಲಿಕಾರ್ಜುನ ವಂದಾಲಿ, ಟಿ. ರವಿಕುಮಾರ್ ಇತರರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

