ಹಾವೇರಿ: ಕರ್ನಾಟಕ ಲೋಕಸೇವಾ ಆಯೋಗದಿಂದ (ಕೆಪಿಎಸ್‌ಸಿ) 2023-24ನೇ ಸಾಲಿನ 374 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗಾಗಿ ಡಿ. 29ರಂದು ಹಾವೇರಿಯ 4 ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಇದು ಮರು ಪರೀಕ್ಷೆಯಾಗಿದ್ದು, ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಲ್.ನಾಗರಾಜ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ‘ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ಎರಡನೇ ಪತ್ರಿಕೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದರು.
ಗಾಂಧಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಾವೇರಿಯ ಜಿ.ಎಚ್. ಕಾಲೇಜ್, ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜು ಹಾಗೂ ಇಜಾರಿ ಲಕಮಾಪುರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಜಾಮರ್ ಅಳವಡಿಸಬೇಕು. ಕೊಠಡಿಯೊಳಗೆ ಕಡ್ಡಾಯವಾಗಿ ಗೋಡೆ ಗಡಿಯಾರ ಹಾಕಬೇಕು. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು’ ಎಂದು ಹೇಳಿದರು.
ಕೇಂದ್ರದೊಳಗೆ ಮೊಬೈಲ್, ಬ್ಲೂಟೂತ್, ವೈರಲೆಸ್ ಸೆಟ್ ಹಾಗೂ ಇತರೆ ಎಲ್ಲ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾರ್ಥಿಗಳು ತುಂಬು ತೋಳಿನ ಶರ್ಟ್, ಟಿ-ಶರ್ಟ್, ಪದರುಗಳುಳ್ಳ ವಿವಿಧ ರೀತಿಯ ವಿನ್ಯಾಸವುಳ್ಳ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು, ಪರೀಕ್ಷಾ ಪ್ರವೇಶ ಪತ್ರ ಹಾಗೂ ಗುರುತಿನ ಚೀಟಿ ತರುವುದು ಕಡ್ಡಾಯ’ ಎಂದರು.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಜೆರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಿಸಬೇಕು’ ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ ಸಭೆಯಲ್ಲಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

