ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಧಾರವಾಡ ಮಹಾನಗರ ಪಾಲಿಕೆ ಸ್ಥಾಪನೆಗೆ ಸಂಪುಟದಲ್ಲಿ ಅನುಮೋದನೆ ನೀಡಿದ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಅಭಿವೃದ್ಧಿಗೆ ಒತ್ತು, ಮಹತ್ವದ ಘೋಷಣೆಗಳು ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ ಎನ್ನುವುದಕ್ಕೆ ಧಾರವಾಡ ಪ್ರತ್ಯೇಕ ಪಾಲಿಕೆ ನಿರ್ಣಯ ಮತ್ತೊಂದು ನಿದರ್ಶನ’ ಎಂದು ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಪರ ಮತ್ತು ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಈ ಭಾಗದವರೇ ಮುಖ್ಯಮಂತ್ರಿಗಳಾಗಿದ್ದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ ಅವರಿಗೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿರಲಿಲ್ಲ’ ಎಂದು ಟೀಕಿಸಿದ್ದಾರೆ.
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸಬೇಕು ಎಂದು ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗಿತ್ತು. ಮನವಿಗೆ ಸ್ಪಂದಿಸಿದ ನಗರಾಭಿವೃದ್ಧಿ ಸಚಿವರು 10 ದಿನ ಸಮಯ ಕೇಳಿದ್ದರು. ಇದೀಗ ಧಾರವಾಡ ಪ್ರತ್ಯೇಕ ಪಾಲಿಕೆ ರಚನೆ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಧಾರವಾಗಿದೆ’ ಎಂದಿದ್ದಾರೆ.
ಪ್ರತ್ಯೇಕ ಪಾಲಿಕೆ ಸ್ಥಾಪನೆಯಿಂದ ಆಡಳಿತದಲ್ಲಿ ಹೊರೆ ಕಡಿತವಾಗಿ ಉತ್ತಮ ಆಡಳಿತ ನೀಡಲು ಸಾಧ್ಯವಾಗುತ್ತದೆ. ಪ್ರತ್ಯೇಕ ಅನುದಾನ ದೊರೆತು ಅವಳಿನಗರದ ಅಭಿವೃದ್ಧಿಗೆ ವೇಗ ದೊರೆಯಲಿದೆ ಎಂದು ತಿಳಿಸಿದ್ದಾರೆ.
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಅನುಮೋದನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹಾಗೂ ಪ್ರತ್ಯೇಕ ಪಾಲಿಕೆಗೆ ಹೋರಾಟ ಸಮಿತಿಯ ಅಧ್ಯಕ್ಷರಿಗೆ, ಸಂಘ- ಸಂಸ್ಥೆಗಳಿಗೆ ಧನ್ಯವಾದ’ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

