ಮೈಸೂರು: ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ವಿಮಾನ ನಿಲ್ದಾಣ ಮೊದಲ ಹಂತದ ವಿಸ್ತರಣೆಗಾಗಿ ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು.
ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಮವಾರ ಬೆಳಗ್ಗೆ ಭೇಟಿ ಮಾಡಿದ ಸಂಸದರು ಮನವಿ ಸಲ್ಲಿಸಿ, ಮೈಸೂರು ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃವೃದ್ಧಿ ಯೋಜನೆಗಳು ಹಾಗೂ ಇತರೆ ವಿಷಯಗಳ ಬಗ್ಗೆ ಸುದೀರ್ಘವಾಗಿ ಸಮಾಲೋಚಿಸಿದರು.
ಮೈಸೂರು ಸಾಂಸ್ಕೃತಿಕ ರಾಜಧಾನಿಯಾಗಿದೆ ಹಾಗೂ ಇತ್ತೀಚೆಗೆ ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿರುವುದರಿಂದ ದೇಶ-ವಿದೇಶ ಗಳಿಂದ ಆಗಮಿಸುವ ಪ್ರಯಾಣಿಕರಿಗೆ, ಉದ್ಯಮಿಗಳಿಗೆ, ಅನುಕೂಲವಾಗಲು ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಮಾಡಬೇಕಾದ ತುರ್ತು ಅಗತ್ಯವಿದೆ. ಈ ನಿಟ್ಟಿನಲ್ಲಿ 46 ಎಕರೆ ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಲು ಮಧ್ಯ ಪ್ರವೇಶಿಸಬೇಕು ಎಂದು ಸಿದ್ದರಾಮಯ್ಯ ಅವರಿಗೆ ಯದುವೀರ್ ಮನವಿ ಮಾಡಿದರು.
ಈಗಾಗಲೇ ಭೂ ಸ್ವಾಧೀನಕ್ಕೆ ವಿಶೇಷ ಜಿಲ್ಲಾಧಿಕಾರಿಗಳ ಒಪ್ಪಿಗೆ ದೊರೆತಿದೆ. ಭೂ ಮಾಲೀಕರಿಗೆ ಪರಿಹಾರ ಪಾವತಿಸಿದ ನಂತರ ಹಸ್ತಾಂತರ ಪ್ರಕ್ರಿಯೆ ಸರಾಗವಾಗಲಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ನಂತರ ಭೂಮಿಯನ್ನು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಹಸ್ತಾಂತರಿಸಬೇಕು ಎಂದು ಅವರು ಮನವರಿಕೆ ಮಾಡಿಕೊಟ್ಟರು.
ಉದ್ದೇಶಿತ ವಿಮಾನ ನಿಲ್ದಾಣದಲ್ಲಿ, ನೀರಾವರಿ ಕಾಲುವೆ, ಓವರ್‌ಹೆಡ್ ವಿದ್ಯುತ್ ತಂತಿಗಳಿವೆ. ಇವುಗಳನ್ನು ಕೂಡ ರಾಜ್ಯ ಸರ್ಕಾರ ತೆರವುಗೊಳಿಸಬೇಕು ಅಥವಾ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು. ಭೂಮಿ ಹಸ್ತಾಂತರ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಗೆ ಅಡ್ಡಿಯಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಮಧ್ಯ ಪ್ರವೇಶಿಸಿ ತ್ವರಿತ ಗತಿಯಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಯದುವೀರ್‌ಮನವಿ ಸಲ್ಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

