Breaking News

ಕಲಬುರಗಿ: 515 ಅಂಗನವಾಡಿಗಳಿಗೆ ನೂತನ ಕಟ್ಟಡ ನಿರ್ಮಾಣ

ಕಲಬುರಗಿ: ಶಿಥಿಲಾವಸ್ಥೆ ತಲುಪಿದ ಅಂಗನವಾಡಿ ಕಟ್ಟಡಗಳಲ್ಲಿ ಮಕ್ಕಳು ಭಯದಲ್ಲಿ ಕಲಿಯುವುದನ್ನು ತಪ್ಪಿಸಲು ಮುಂದಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ 515 ಅಂಗನವಾಡಿಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸುತ್ತಿದೆ.
ಕೇಂದ್ರ ಸರ್ಕಾರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್‌)ಯಡಿ ಜಿಲ್ಲೆಯ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 3420 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳ ಪೈಕಿ ಇದುವರೆಗೆ 1960 ಅಂಗನವಾಡಿಗಳಿಗೆ ಮಾತ್ರ ಸ್ವಂತ ಕಟ್ಟಡವಿದೆ. ಉಳಿದವು ಶಾಲಾ ಕಟ್ಟಡ, ಸಮುದಾಯ ಭವನ, ಪಂಚಾಯಿತಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ 1159 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲೇ ನಡೆಯುತ್ತಿವೆ.
ಕಳೆದ ಸೆಪ್ಟೆಂಬರ್ 17ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತಲಾ ₹ 23 ಲಕ್ಷ ವೆಚ್ಚದಲ್ಲಿ 515 ಸುಸಜ್ಜಿತ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿತ್ತು. ಅದಕ್ಕೆ ತಕ್ಕಂತೆ ಜಿಲ್ಲಾಧಿಕಾರಿ ಅವರು ಈಗಿರುವ ಅಂಗನವಾಡಿಗಳ ಬಳಿಯೇ ಸರ್ಕಾರಿ ಜಾಗವನ್ನು ಮಂಜೂರು ಮಾಡಿದ್ದರಿಂದ ಇದೇ ಮೊದಲ ಬಾರಿಗೆ ಇಷ್ಟೊಂದು ಸಂಖ್ಯೆಯ ಅಂಗನವಾಡಿಗಳಿಗೆ ಕಟ್ಟಡ ಭಾಗ್ಯ ಸಿಗುತ್ತಿದೆ. ಅನಿರುದ್ಧ ಶ್ರವಣ್ ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ)ಯಾಗಿದ್ದ ಸಂದರ್ಭದಲ್ಲಿ ಏಕಕಾಲಕ್ಕೆ 200 ಅಂಗನವಾಡಿಗಳ ಕಟ್ಟಡಗಳನ್ನು ಮಂಜೂರು ಮಾಡಿದ್ದರು ಎಂದು ಇಲಾಖೆಯ ಅಧಿಕಾರಿಗಳು ನೆನಪಿಸಿಕೊಳ್ಳುತ್ತಾರೆ.
ಸರ್ಕಾರ ಪಬ್ಲಿಕ್ ಸ್ಕೂಲ್‌ಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳನ್ನು ತೆರೆಯುವುದಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ವ್ಯಕ್ತಪಡಿಸಿದ್ದರು. ಬದಲಾಗಿ ಅಂಗನವಾಡಿಗಳಲ್ಲೇ ತರಗತಿ ನಡೆಸಲು ಪಟ್ಟು ಹಿಡಿದಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡೇ ಹೊಸ ಕಟ್ಟಡಗಳಲ್ಲಿ ತರಗತಿ ಕೊಠಡಿ, ಅಡುಗೆ ಕೋಣೆ, ಆಹಾರ ಸಾಮಗ್ರಿಗಳ ದಾಸ್ತಾನು ಕೊಠಡಿ, ಎರಡು ಶೌಚಾಲಯಗಳು ನಿರ್ಮಾಣವಾಗಲಿವೆ. ಸರಾಸರಿ 30X40 ಅಳತೆಯ ನಿವೇಶನಗಳನ್ನು ಕಟ್ಟಡ ನಿರ್ಮಾಣಕ್ಕಾಗಿ ಮಂಜೂರು ಮಾಡಿಸಿಕೊಳ್ಳಲಾಗಿದೆ.
ಈ ಅಂಗನವಾಡಿ ಕಟ್ಟಡಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಐಸಿಡಿಎಸ್ ಯೋಜನೆಯಡಿ ₹ 7 ಲಕ್ಷ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ₹ 8 ಲಕ್ಷ ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ₹ 8 ಲಕ್ಷ ಸೇರಿದಂತೆ ಒಟ್ಟು ₹ 23 ಲಕ್ಷ ವೆಚ್ಚ ಮಾಡಲಾಗುತ್ತಿದೆ.
ಜಿಲ್ಲೆಯ ಅಂಗನವಾಡಿಗಳಿಗೆ ಸುಸಜ್ಜಿತ ಕಟ್ಟಡ ಒದಗಿಸಬೇಕು ಎಂಬ ಉದ್ದೇಶದಿಂದ ಜಿಲ್ಲೆಯ ವಿವಿಧೆಡೆ ಲಭ್ಯವಿರುವ ನಿವೇಶನಗಳನ್ನು ಗುರುತಿಸಲು ಹಲವು ಸಭೆಗಳನ್ನು ನಡೆಸಲಾಗಿತ್ತು. ಇದೀಗ 515 ಅಂಗನವಾಡಿಗಳಿಗೆ ಕಟ್ಟಡ ನಿರ್ಮಾಣವಾಗಲಿದೆ.-ರಾಜಕುಮಾರ ರಾಠೋಡ, ಉಪ ನಿರ್ದೇಶಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಜಿಲ್ಲೆಯಲ್ಲಿ 2475 ಅಂಗನವಾಡಿಗಳಿಗೆ ಸುಸಜ್ಜಿತ ಕಟ್ಟಡಗಳು ದೊರೆತಂತಾಗಿದ್ದು ಬಾಕಿ ಇರುವ ಅಂಗನವಾಡಿಗಳಿಗೆ ಕಟ್ಟಡ ನಿರ್ಮಿಸಲು ನಗರ ಪ್ರದೇಶದಲ್ಲಿ 120 ಹಾಗೂ ಗ್ರಾಮೀಣ ಪ್ರದೇಶದಲ್ಲಿ 75 ನಿವೇಶನಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಬಿ., ತಿಳಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *