ತುಮಕೂರು: ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಿಗೆ ನೀರು ಒದಗಿಸುವ ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಕಾಲುವೆ ನಿರ್ಮಾಣಕ್ಕಾಗಿ ಅರಣ್ಯ ಭೂಮಿ ಬಳಕೆ ಮಾಡಿಕೊಳ್ಳಲು ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯಡಿ ತುಮಕೂರು ಜಿಲ್ಲೆಯಲ್ಲಿ ಕಾಲುವೆ ನಿರ್ಮಾಣಕ್ಕಾಗಿ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಧಾಮದ ಬಳಿ 51.32 ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ವಿ ಸೋಮಣ್ಣ ಮಾಹಿತಿ ನೀಡಿದ್ದಾರೆ.
ತುಮಕೂರು ಜಿಲ್ಲೆಯ ಜನತೆಯ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ ನನ್ನ ಬೆಂಬಲಕ್ಕೆ ನಿಂತು ಅರಣ್ಯ ಭೂಮಿ ಬಳಸಿಕೊಳ್ಳಲು ಅನುಮತಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರಿಗೆ ಧನ್ಯವಾದಗಳು ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ಅನುಮತಿ ನೀಡಿರುವ ಕಾರಣ ಕಾಲುವೆ ನಿರ್ಮಾಣಕ್ಕೆ ಇದ್ದ ದೊಡ್ಡ ಆತಂಕವೊಂದು ನಿವಾರಣೆಯಾದಂತಾಗಿದೆ. ಈಗಾಗಲೇ ಹಲವು ಕಡೆಗಳಲ್ಲಿ ಕೆಲಸ ಭರದಿಂದ ಸಾಗುತ್ತಿದ್ದು 2028ರ ಮಾರ್ಚ್ ವೇಳೆಗೆ ಅಂತ್ಯವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ಚಿಕ್ಕಮಗಳೂರು, ದಾವಣಗೆರೆ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ 5.57 ಲಕ್ಷ ಎಕರೆ ಭೂಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸಲು ಈ ಯೋಜನೆ ನರವಾಗಲಿದೆ. ಈ ಯೋಜನೆಗೆ 29.90 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಸೂಕ್ಷ್ಮ ನೀರಾವರಿ ಪದ್ಧತಿಯಲ್ಲಿ 367 ಕೆರೆಗಳಿಗೆ ಅವುಗಳ ಸಾಮರ್ಥ್ಯದ ಅರ್ಧದಷ್ಟು ನೀರನ್ನು ತುಂಬಿಸಲು ಯೋಜಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

