ಬೆಂಗಳೂರು: ಜಾತಿವಾರು ಜನಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯ ಮುಂದಿರಿಸುವ ಮಹತ್ವದ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಕುರಿತು ಚರ್ಚಿಸಲು ತೀರ್ಮಾನಿಸಲಾಗಿದೆ.
ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ವರದಿಯು ಖಜಾನೆಯಲ್ಲಿದ್ದು, ಮುಚ್ಚಿದ ಲಕೋಟೆಯಲ್ಲಿದೆ. ಸಂಪುಟ ಸಭೆಯಲ್ಲೇ ಮುಚ್ಚಿದ ಲಕೋಟೆ ತೆರೆಯಲು ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಇಂದಿನ ಸಚಿವ ಸಂಪುಟದಲ್ಲೇ ಜಾತಿಗಣತಿ ವರದಿ ಮಂಡನೆಯಾಗುವ ಕುರಿತು ಚರ್ಚೆಗಳು ನಡೆದಿದ್ದವು. ಆದರೆ, ಸಿಎಂ ಸಿದ್ದರಾಮಯ್ಯ ಅವರು ಜಾತಿ ಗಣತಿ ವರದಿಯನ್ನು ಈ ಸಭೆಯಲ್ಲಿ ಚರ್ಚೆ ಮಾಡುವುದಿಲ್ಲ. ಮುಂದಿನ ಸಚಿವ ಸಂಪುಟದ ಮುಂದೆ ಇಡಲಾಗುವುದು ಎಂದು ಬುಧವಾರ ಸ್ಪಷ್ಟಪಡಿಸಿದ್ದರು.
ಹಾಗಾಗಿ ಹಲವಾರು ತಿಂಗಳುಗಳಿಂದ ಪ್ರಸ್ತಾಪಕ್ಕೆ ಬರುತ್ತಲೇ ಇರುವ ವಿವಾದಿತ ಜಾತಿ ಗಣತಿ ಮಂಡನೆ ವಿಷಯ ಮತ್ತೆ ಚರ್ಚೆಗೆ ಬಂದಿದೆ. ಮುಂದಿನ ದಿನಗಳಲ್ಲಿ ಮಂಡನೆ ಮಾಡಲಾಗುವುದು ಎಂದು ಹೇಳಿಕೆ ನೀಡುತ್ತಾ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ʼಮುಂದಿನ ಸಂಪುಟ ಸಭೆʼಯಲ್ಲಿ ಜಾತಿ ಗಣತಿ ವರದಿ ಮಂಡನೆ ಸಂಬಂಧ ವಿಷಯ ಮಂಡಿಸುವುದಾಗಿ ಹೇಳಿದ್ದಾರೆ. ಇದರಿಂದ ಜಾತಿ ಗಣತಿ ವರದಿ ಸಂಬಂಧ ಮುಂದಿನ ವಾರ ಅಂದರೆ ಜ. 23 ರಂದು ವಿಷಯ ಮಂಡನೆ ಮಾಡುವುದು ಬಹುತೇಕ ಖಚಿತವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

