ಬೆಂಗಳೂರು: ಬಡವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವುದು ಸರಕಾರದ ಗುರಿಯಾಗಿದೆ. ಸರಕಾರದ ಎಲ್ಲಾ ಸಂಸ್ಥೆಗಳು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕಾಗಿರುವುದು ಅಂತಿಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ನಗರದ ಮೇರಿ ಹಿಲ್ ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ಕಚೇರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಿದ್ದರು.
ಸರಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು. ಶ್ರೀಮಂತರು ಮತ್ತು ನಮ್ಮಂಥ ರಾಜಕಾರಣಿಗಳೂ ಸರ್ಕಾರಿ ಆಸ್ಪತ್ರೆಗೆ ಬರುವಂಥಾಗಬೇಕು ಎನ್ನುವ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು.
ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ವಿವಿ ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವವಿದ್ಯಾನಿಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜೀವ್ ಗಾಂಧಿ ವಿವಿಯ ಕೊಡುಗೆ ಅಪಾರ ಎಂದರು.
ರಾಜೀವ್ ಗಾಂಧಿ ಆರೋಗ್ಯ ವಿವಿಯು ಆರೋಗ್ಯ ಸೇವೆ ಸರಳವಾಗಿ ಜನರಿಗೆ ಸಿಗುವ ದಿಕ್ಕಿನಲ್ಲಿ ಸಂಶೋಧನೆಗಳನ್ನು ಹೆಚ್ಚೆಚ್ಚು ನಡೆಸಬೇಕು. ದೇಶದ ಅತ್ಯುತ್ತಮ ಆರೋಗ್ಯ ಸೇವೆ ಬಡವರಿಗೂ ಸುಲಭವಾಗಿ ಸಿಗುವಂತೆ ಮಾಡಬೇಕು ಎಂದು ಸಿದ್ದರಾಮಯ್ಯ ನೀಡಿದರು.
ಈ ಕ್ಷೇತ್ರದ ಡಿಪ್ಲೊಮಾ ಮತ್ತು ಇತರೆ ಕೋರ್ಸ್ ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ವೈದ್ಯ ವಿಜ್ಞಾನ ಪದವೀಧರರೂ ಯುವನಿಧಿಗೆ ಅರ್ಹತೆ ಗಳಿಸಿದ್ದಾರೆ. ವೈದ್ಯ ವಿದ್ಯಾರ್ಥಿಗಳು ಇತರ ಕ್ಷೇತ್ರಗಳಿಗೆ ವಲಸೆ ಹೋಗದೆ ಆರೋಗ್ಯ ಕ್ಷೇತ್ರದಲ್ಲೇ ತಮ್ಮ ಸೇವೆ ಸಲ್ಲಿಸಬೇಕು ಎಂದು ಕರೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

