ಭಾಲ್ಕಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗ್ಯಾರಂಟಿಗಳ ಅನುಷ್ಠಾನಕ್ಕೆ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕು’ ಎಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹಣಮಂತರಾವ್ ಚವ್ಹಾಣ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಸೇರಿ ಪಂಚ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ ಪಾತ್ರ ಬಹುಮುಖ್ಯವಾಗಿದೆ. ಎಲ್ಲಾ ಅಧಿಕಾರಿಗಳು ಈ ಯೋಜನೆಯಲ್ಲಿ ನೋಂದಾಯಿಸಿರುವ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಗೃಹಲಕ್ಷ್ಮಿ ಯೋಜನೆಯಡಿ ತಾಲೂಕಿನಲ್ಲಿ ಡಿಸೆಂಬರ್ 2024ರ ಅಂತ್ಯಕ್ಕೆ ಒಟ್ಟು 61,099 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅವುಗಳಲ್ಲಿ ಅಕೌಂಟ್ ಶೇಡ್ ಆಗದ ಕಾರಣ 485 ಮತ್ತು ಐಟಿ, ಜಿಎಸ್‍ಟಿ ಕಾರಣಗಳಿಂದ 526 ಅರ್ಜಿಗಳು ಅನುರ್ಜಿತಗೊಂಡಿವೆ ಎಂದು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಾಹಿತಿ ನೀಡಿದರು.
ಶಕ್ತಿ ಯೊಜನೆ ಅಡಿಯಲ್ಲಿ ಉತ್ತಮ ಪ್ರಗತಿಯಾಗುತ್ತಿದ್ದು, ಯೋಜನೆ ಪ್ರಾರಂಭವಾದಾಗಿನಿಂದ ಸಾರಿಗೆ ಇಲಾಖೆ ಅಧಿಕ ಲಾಭ ಪಡೆಯುತ್ತಿದೆ’ ಎಂದು ಭಾಲ್ಕಿ ಬಸ್ ಘಟಕದ ವ್ಯವಸ್ಥಾಪಕ ಭದ್ರಪ್ಪಾ ಹುಡಗೆ ತಿಳಿಸಿದರು.
ಗೃಹಜ್ಯೋತಿ ಯೋಜನೆಯಡಿಯಲ್ಲಿ ನೋಂದಣಿಯಾದ ಎಲ್ಲರಿಗೂ ವಿದ್ಯುತ್ ನೀಡಲಾಗುತ್ತಿದೆ. ಆದರೆ ಜೆಸ್ಕಾಂ ಅಧಿಕಾರಿಗಳು ಅನಧಿಕೃತ ಬಿಲ್ ನೀಡುತ್ತಿದ್ದಾರೆ. ಚಾಲನೆ ಇಲ್ಲದ ಮೀಟರ್‌ಗಳಿಗೂ ಬಿಲ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಸರಿಪಡಿಸಬೇಕು ಎಂದು ಹಣಮಂತರಾವ್ ಚವ್ಹಾಣ ಜೆಸ್ಕಾಂ ಅಧದಿಕಾರಿಗಳಿಗೆ ತಾಕೀತು ಮಾಡಿದರು.
ಅನ್ನಭಾಗ್ಯ ಯೋಜನೆಯಲ್ಲಿ ಮೊದಲು ಹಣ ಬರುತ್ತಿತ್ತು. ಈಗ ಬಾಕಿ ಉಳಿದ ಅಕ್ಕಿಯ ಹಣ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಇದನ್ನು ಸರಿಪಡಿಸಬೇಕು’ ಎಂದು ಅನ್ಯಭಾಗ್ಯ ಯೋಜನೆಯ ಅಧಿಕಾರಿಗಳಿಗೆ ತಿಳಿಸಿದರು.
ಅಧಿಕಾರಿಗಳು ಪೂರ್ವ ತಯಾರಿ ಮಾಡಿಕೊಂಡು ಸಭೆಗೆ ಹಾಜರಾಗಬೇಕು. ಸಭೆಯಲ್ಲಿ ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ತಮ್ಮ ಕಚೇರಿಯ ಸಿಬ್ಬಂದಿಯನ್ನು ಕಳುಹಿಸಿ, ಅಧಿಕಾರಿಗಳು ಸಭೆಗೆ ಗೈರಾಗುತ್ತಿರುವುದು ಉತ್ತಮ ಬೆಳವಣಿಗೆಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಉದ್ಯೋಗ ವಿನಿಮಯ ಮತ್ತು ಕೈಗಾರಿಕಾ ತರಬೇತಿ ಇಲಾಖೆಯ ಅಧಿಕಾರಿಗಳು ಸಭೆಗೆ ಗೈರಾಗಿದ್ದರು. ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖ್ ಅಬ್ದುಲ್ ನಸೀರ್, ಸದಸ್ಯರಾದ ವಿಲಾಸ ಪಾಟೀಲ ದಾಡಗಿ, ಜಯಶ್ರೀ ಮಾನಕಾರಿ, ಓಂಕಾರ ಭಾತಂಬ್ರಾ, ಸಂಗಮೇಶ ವಾಲೆ ಹಾಗೂ ತಾ.ಪಂ ಸಿಬ್ಬಂದಿ ಸುನಿಲ್ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

