ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಮಾಣವನ್ನು ತಗ್ಗಿಸಲು, ಗರ್ಭಿಣಿಯರ ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಂಡಿರುವ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ರಾಯಚೂರು ಜಿಲ್ಲೆಯಿಂದಲೆಯೇ ಆರೋಗ್ಯ ಇಲಾಖೆ ಸಚಿವ ದಿನೇಶ ಗುಂಡೂರಾವ್ ಅವರು ಚಾಲನೆ ನೀಡಿದರು.
ಸ್ಥಳೀಯ ತಾಯಿ ಮತ್ತು ಮಕ್ಕಳ ಸರ್ಕಾರಿ (ಹಳೆಯ ಜಿಲ್ಲಾಸ್ಪತ್ರೆ ಆವರಣ) ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಾತೃತ್ವ ಸುರಕ್ಷಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಬಾಣಂತಿ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ದಿನಗಳಲ್ಲಿ ಅಂತಹ ಘಟನೆಗಳು ನಡೆಯದಂತೆ ಬಾಣಂತಿಯರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ, ಸಕಾಲಕ್ಕೆ ಚಿಕಿತ್ಸೆ ಮತ್ತು ಜಾಗೃತಿ ಅಭಿಯಾನ ಹಮ್ಮಿಕೊಳ್ಳುವ ಮೂಲಕ ತಾಯಂದಿರ ಮರಣ ಪ್ರಕರಣಗಳು ವರದಿಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ರಾಯಚೂರು ಜಿಲ್ಲೆಯಿಂದಲೇ ಮಾತೃತ್ವ ಸುರಕ್ಷಾ ಅಭಿಯಾನವನ್ನು ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಭಿಯಾನ ನಡೆಸಲಾಗುವುದು. ಈ ಅಭಿಯಾನದಡಿ ಪ್ರತಿ ತಿಂಗಳು ಎರಡು ಬಾರಿ ಗರ್ಭಿಣಿಯರ ಆರೋಗ್ಯ ತಪಾಸಣೆ ಕೈಗೊಂಡು ಅವರಿಗೆ ಅಗತ್ಯವಾದ ಪೌಷ್ಠಿಕಾಂಶದ ಆಹಾರ, ಆರೋಗ್ಯ ಸೇವೆಯನ್ನು ಒದಗಿಸಿಕೊಡುವ ಉದ್ದೇಶ ಹೊಂದಲಾಗಿದೆ ಎಂದರು.
ರಾಜ್ಯದ ವಿವಿಧೆಡೆ ಬಾಣಂತಿಯರ ಸಾವು ಪ್ರಕರಣಗಳು ವರದಿಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.1 ಲಕ್ಷಕ್ಕೆ 64 ಬಾಣಂತಿಯರ ಸಾವು ಸಂಭವಿಸಿದ್ದು, ಇದನ್ನು ಶೂನ್ಯಕ್ಕೆ ಅಲ್ಲದಿದ್ದರೂ ಕನಿಷ್ಠ ಸಂಖ್ಯೆಗೆ ತರಲು ಪ್ರಯತ್ನಿಸಲಾಗುವುದು. ಗರ್ಭಿಣಿಯರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಉತ್ತಮವಾಗಿರುವಂತೆ ಎಲ್ಲಾ ಕಡೆಗೆ ಕಡ್ಡಾಯವಾಗಿ ಅವರಿಗೆ ಗುಣಮಟ್ಟದ ಚಿಕಿತ್ಸೆ ದೊರೆತು, ತಾಯಂದಿರ ಅನಾರೋಗ್ಯ ಪ್ರಕರಣಗಳು ಸಂಪೂರ್ಣ ನಿಯಂತ್ರಣಕ್ಕೆ ಬಂದು ಶೂನ್ಯಕ್ಕೆ ತರುವ ರೀತಿಯಲ್ಲಿ ಜಾಗೃತಿ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಸೇರಿದಂತೆ ಎಲ್ಲಾ ಕಡೆಗೆ ಆದ್ಯತೆಯ ಮೇರೆಗೆ ಈ ಅಭಿಯಾನ ಜರುಗಿಸಲಾಗುವುದು ಎಂದು ತಿಳಿಸಿದರು.
ಗರ್ಭಿಣಿಯರಿಗೆ ಪ್ರಸವಪೂರ್ವ ತಪಾಸಣೆ ಓಬಿಜಿವೈ ತಜ್ಞ ವೈದ್ಯರಿಂದ ಗರ್ಭಿಣಿಯರಿಗೆ ಎರಡನೇ ಅಥವಾ ಮೂರನೇ ತ್ರೈಮಾಸಿಕದಲ್ಲಿ ಕನಿಷ್ಠ ಒಂದು ಪ್ರಸವಪೂರ್ವ ತಪಾಸಣೆ ನಡೆಯಬೇಕು. ಪ್ರಸವ ಪೂರ್ವ ಸಮಯದಲ್ಲಿ ಆರೈಕೆಯ ಗುಣಮಟ್ಟ ಸುಧಾರಿಸಬೇಕು ಎಂದು ಸಚಿವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಾನ್ವಿ ಶಾಸಕ ಜಿ.ಹಂಪಯ್ಯ ನಾಯಕ್, ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷೆ ನರಸಮ್ಮ ಮಾಡಗಿರಿ, ಉಪಾಧ್ಯಕ್ಷ ಸಜೀದ್ ಸಮೀರ, ಹಿರಿಯ ಸದಸ್ಯ ಜಯಣ್ಣ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಆರ್‌ಸಿಎಚ್ ಅಧಿಕಾರಿ ಡಾ.ನಂದಿತಾ ಸೇರಿ ಇಲಾಖೆಯ ವಿವಿಧ ವಿಭಾಗದ ಅಧಿಕಾರಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು, ಮಹಿಳೆಯರು, ಗರ್ಭೀಣಿಯರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

