ತುಮಕೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ವಾರ್ಷಿಕ ಸುಮಾರು ₹3 ಸಾವಿರ ಕೋಟಿ ಅನುದಾನ ಅಗತ್ಯವಿದೆ ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಚಂದ್ರಶೇಖರ್‌ಗೌಡ ಹೇಳಿದರು.
ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಪ್ರಗತಿ ಪರಿಶೀಲನೆ ನಡೆಸಿದರು.
ಗೃಹಲಕ್ಷ್ಮಿ ಯೋಜನೆಯಲ್ಲಿ ಹಣ ಪಾವತಿಯಾಗುತ್ತಿಲ್ಲ ಎಂದು ಕೆಲವರು ದೂರು ನೀಡುತ್ತಿದ್ದಾರೆ. ಯಾವ ಕಾರಣಕ್ಕೆ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿಲ್ಲ ಎಂಬ ಬಗ್ಗೆ ಪರಿಶೀಲಿಸಿ, ಸಮಸ್ಯೆ ಬಗೆಹರಿಸಬೇಕು ಎಂದು ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಈವರೆಗೆ ಗೃಹಲಕ್ಷ್ಮಿ ಯೋಜನೆಗೆ ₹1,807 ಕೋಟಿ, ಗೃಹ ಜ್ಯೋತಿ ಯೋಜನೆಗೆ ₹314 ಕೋಟಿ, ಅನ್ನ ಭಾಗ್ಯ ಯೋಜನೆಗೆ ₹474 ಕೋಟಿ ಅನುದಾನ ಬಿಡುಗಡೆಯಾಗಿದೆ. ಸೆಪ್ಟೆಂಬರ್ ತಿಂಗಳ ಅನುದಾನ ಬಿಡುಗಡೆಯಾಗಿದ್ದು, ನೇರ ನಗದು ಮೂಲಕ ಹಣ ವರ್ಗಾವಣೆ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ನವೆಂಬರ್, ಡಿಸೆಂಬರ್ ಅನುದಾನ ಬಿಡುಗಡೆಯಾಗಬೇಕಿದೆ ಎಂದರು.
ಯುವ ನಿಧಿ ಯೋಜನೆಯಡಿ 6,410 ಮಂದಿ ನೋಂದಾಯಿಸಿಕೊಂಡಿದ್ದಾರೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 1.98 ಲಕ್ಷಕ್ಕೂ ಹೆಚ್ಚು ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ನಗರದ ಮಿನಿವಿಧಾನಸೌಧದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಕಚೇರಿ ತೆರೆಯಲಾಗುವುದು. ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ದೂರುಗಳಿದ್ದರೆ ಕಚೇರಿಗೆ ಭೇಟಿನೀಡಿ ಪರಿಹರಿಸಿಕೊಳ್ಳಬಹುದು ಎಂದು ಹೇಳಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಎಚ್.ಸಿ.ಹನುಮಂತಯ್ಯ, ನರಸೀಯಪ್ಪ, ಬಿ.ಪಂಚಾಕ್ಷರಯ್ಯ, ಅಂಬರೀಶ್ ಇತರರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

