ಹುಬ್ಬಳ್ಳಿ: ಹುಬ್ಬಳ್ಳಿಯ ಲಿಂಗರಾಜನಗರ ರಸ್ತೆಯಲ್ಲಿರುವ ಪ್ರತಿಷ್ಠಿತ ಬಾರ್ ಪಾರ್ಕಿಂಗ್ ಜಾಗದಲ್ಲಿ, ಹಳೇ ದ್ವೇಷಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿ ಪರಾರಯಾಗಿದ್ದ ಮೂವರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ನಿನ್ನೆ ತಡರಾತ್ರಿ ಆಕಾಶ್ ವಾಲ್ಮೀಕಿ ಎಂಬಾತನನ್ನು ಬಾರ್ ಒಂದರ ಪಾರ್ಕಿಂಗ್ ಸ್ಥಳದಲ್ಲಿ ಮನಬಂದಂತೆ ಇರಿದು ಹತ್ಯೆ ಮಾಡಲಾಗಿತ್ತು. ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಡಿಸಿಪಿ ನಂದಗಾವಿ, ವಿದ್ಯಾನಗರದ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ, ಕೊಲೆಗಾರರ ಬಂಧನಕ್ಕೆ ಕ್ರಮ ಕೈಗೊಂಡಿದ್ದರು.
ಆನಂದನಗರದ ಅಭಿಷೇಕ ಶಿರೂರ, ವಿನೋದ ಅಂಬಿಗೇರ ಹಾಗೂ ಯಲ್ಲಪ್ಪ ಕೋಟಿ ಎಂಬ ಈ ಮೂವರು ಕೊಲೆ ಆರೋಪಿಗಳು ಎಂದು ತಿಳಿದು ಬಂದಿದೆ. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ. ಆರೋಪಿಗಳು ಇರುವ ಜಾಗ ಪತ್ತೆ ಮಾಡಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆಗ MTS ಕಾಲೋನಿ ಬಳಿ, ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರು ಆರೋಪಿಗಳ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ. ಮೂವರು ಆರೋಪಿಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೆಯ ದ್ವೇಷಕ್ಕೆ ಕೊಲೆ ಮಾಡಿದ್ದಾರೆಂದು ತಿಳಿದು ಬಂದಿದೆ. ಕಿಮ್ಸ್ ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

