ಹುಬ್ಬಳ್ಳಿ: ದೆಹಲಿಯ ಕೆಂಪುಕೋಟೆ ಬಳಿ ಕಾರ್ ಸ್ಫೋಟ ಘಟನೆಯ ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.ಬ್ಯೂರೊ ಆಫ್ ಸಿವಿಲ್ ಏವಿಯೇಶನ್ ಸೆಕ್ಯೂರಿಟಿ ಸೂಚನೆ ಮೇರೆಗೆ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಹಾಗೂ ಇಲ್ಲಿಂದ ಪ್ರಯಾಣಿಸುವ ಪ್ರಯಾಣಿಕರ ಸರಕುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಪ್ರಯಾಣಿಕರು ಯಾವ ಸ್ಥಳದಿಂದ ಹುಬ್ಬಳ್ಳಿಗೆ ಬಂದಿಳಿದಿದ್ದಾರೆ…? ಯಾವ ಕಾರಣಕ್ಕೆ ಬಂದಿದ್ದಾರೆ…? ಎಂಬ ವಿಚಾರಣೆಯ ಜತೆಗೆ ಇಲ್ಲಿಂದ ಬೇರೆ ಕಡೆ ಪ್ರಯಾಣಿಸುವ ಪ್ರಯಾಣಿಕರನ್ನು ಸಹ ಕೂಲಂಕಷವಾಗಿ ವಿಚಾರಣೆ ನಡೆಸಲಾಗುತ್ತಿದೆ.

ಈಗಾಗಲೇ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕೆಎಸ್‌ಐಎಸ್‌ಎಫ್ (ಕರ್ನಾಟಕ ರಾಜ್ಯ ಕೈಗಾರಿಕಾ ರಕ್ಷಣಾ ಪಡೆ) ಸಿಬ್ಬಂದಿ ಭದ್ರತೆ ನೀಡುತ್ತಿದ್ದಾರೆ. ಭದ್ರತಾ ಸಿಬ್ಬಂದಿಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬರುವ ಪ್ರತಿ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ವಾಹನಗಳ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ವಿಮಾನ ನಿಲ್ದಾಣದ ಪಾರ್ಕಿಂಗ್‌ನಲ್ಲಿ ಬಹಳ ಸಮಯದಿಂದ ನಿಲುಗಡೆ ಮಾಡಿರುವ ವಾಹನಗಳ ಪರಿಶೀಲನೆ ನಡೆಸಲಾಗುತ್ತಿದೆ. ಪ್ರತಿ ವಾಹನದ ತಪಾಸಣೆ ಹಾಗೂ ಪ್ರಯಾಣಿಕರ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿರುವುದರಿಂದ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆಗೆ ಈ ಮೊದಲಿಗಿಂತ ಹೆಚ್ಚಿನ ಸಮಯ ವಿನಿಯೋಗವಾಗುತ್ತಿದೆ.ಹೀಗಾಗಿ, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಪ್ರಯಾಣಿಸುವವರು ಸಾಕಷ್ಟು ಮುಂಚಿತವಾಗಿ ನಿಲ್ದಾಣಕ್ಕೆ ಬರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

