ರಾಜಧಾನಿಯ ಕೆ.ಆರ್. ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆ.ಆರ್. ಪುರಂನ ಮಂಜುನಾಥ್ ಲೇಔಟ್‌ನಲ್ಲಿ ಈ ದುರಂತ ಸಂಭವಿಸಿದೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ, ಮನೆಯಲ್ಲಿದ್ದ ಪೂರ್ಣಿಮಾ (46) ಮತ್ತು ವೆಂಕಟೇಶ್ (40) ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ. ಪ್ರಸ್ತುತ ಇಬ್ಬರ ಸ್ಥಿತಿಯೂ ಗಂಭೀರವಾಗಿದ್ದು, ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಮನೆಯ ಕಿಟಕಿ, ಬಾಗಿಲುಗಳು ಜಖಂಗೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಕೆ.ಆರ್. ಪುರಂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಡುಗೆ ಅನಿಲ ಸೋರಿಕೆಯಿಂದ ಈ ಸ್ಫೋಟ ಸಂಭವಿಸಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

