ಹಾಸನ : ಅರಕಲಗೂಡು ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಅಕ್ರಮವನ್ನು ಪ್ರಶ್ನಿಸಿದ ರೈತನ ಮೇಲೆ ಗ್ರಾಮ ಪಂಚಾಯತ್ ಸದಸ್ಯರು ಹಲ್ಲೆ ನಡೆಸಿದ ಘಟನೆ ನಡೆದಿದೆ. ರವಿ ಎಂಬ ರೈತನೇ ಹಲ್ಲೆಗೆ ಒಳಗಾದವರು. 15ನೇ ಹಣಕಾಸು ಯೋಜನೆಯಲ್ಲಿ ನಡೆದ ಕಾರ್ಯಗಳ ಬಗ್ಗೆ ಮಾಹಿತಿ ತಿಳಿಯಲು ರವಿ ಆರ್‌ಟಿಐ ಮೂಲಕ ದಾಖಲೆಗಳನ್ನು ಕೇಳಿದ್ದರು. ದಾಖಲೆಗಳನ್ನು ಪಡೆಯಲು ತಮ್ಮ ಬಳಿ ಇದ್ದ ಹಸುವನ್ನು ಮಾರಾಟ ಮಾಡಿ ಹಣ ಕಟ್ಟಿದರೆಂದು ತಿಳಿದುಬಂದಿದೆ. ಕಾಳೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ರವಿ ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಲೋಕಾಯುಕ್ತ ಅಧಿಕಾರಿಗಳು ಗ್ರಾಮ ಪಂಚಾಯತಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದರು. ಇದರಿಂದ ಆಕ್ರೋಶಗೊಂಡ ಗ್ರಾಮ ಪಂಚಾಯತ್ ಸದಸ್ಯರಾದ ಆನಂದ್, ವಿಶ್ವ ಸೇರಿದಂತೆ ಕೆಲವರು ರವಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ̤ ಹಲ್ಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ರವಿ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

