ಬೆಂಗಳೂರಿನಲ್ಲಿ ಪುಂಡರ ಹಾವಳಿ ಹೆಚ್ಚಾಗುತ್ತಿದ್ದು, ಯಾವುದಾದರೂ ವಿಷಯದ ಬಗ್ಗೆ ಪ್ರಶ್ನಿಸಿದರೆ ಹಲ್ಲೆ ನಡೆಸುವ ಅನೇಕ ಘಟನೆಗಳು ನಡೆಯುತ್ತಿವೆ. ಇದೀಗ ಕಬ್ಬನ್ ರಸ್ತೆಯಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಿದ್ದ ಯುವಕರನ್ನು ವಿಡಿಯೋದಲ್ಲಿ ಚಿತ್ರೀಕರಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಶನಿವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಕಬ್ಬನ್ ರಸ್ತೆಯಲ್ಲಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬರು ಮುಂದೆ ಮೂರು ಬೈಕ್‌ಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಾ ಬರುತ್ತಿದ್ದ ಕೆಲ ಯುವಕರನ್ನು ಗಮನಿಸಿ ವಿಡಿಯೋ ಚಿತ್ರೀಕರಿಸಿದ್ದಾರೆ. ವಿಡಿಯೋ ಮಾಡುತ್ತಿರುವುದನ್ನು ಗಮನಿಸಿದ ಯುವಕರು ಆ ವ್ಯಕ್ತಿಯನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಅಸಭ್ಯವಾಗಿ ಬೆರಳು ತೋರಿಸಿ ಬೆದರಿಕೆ ಹಾಕಿದರೆಂಬ ಆರೋಪ ಕೇಳಿಬಂದಿದೆ. ಇದಷ್ಟೇ ಅಲ್ಲದೆ, ಯುವಕರಲ್ಲಿ ಒಬ್ಬನು ತನ್ನ ಕೈಯಲ್ಲಿದ್ದ ವಸ್ತುವನ್ನು ಆ ವ್ಯಕ್ತಿಯ ಮೇಲೆ ಎಸೆದು ರೌಡಿಸಂ ಮೆರೆದಿದ್ದಾನೆ. ಈ ಘಟನೆಗೆ ಕಮರ್ಶಿಯಲ್ ಸ್ಟ್ರೀಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

