ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ಅಪರಾಧಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಮಹತ್ವದ ಶಿಕ್ಷೆಯನ್ನು ಪ್ರಕಟಿಸಿದೆ. ಬುಧವಾರವಷ್ಟೇ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ನ್ಯಾಯಾಲಯ ಅಪರಾಧಿಗಳು ಎಂದು ಘೋಷಿಸಿತ್ತು. ಗುರುವಾರ ಶಿಕ್ಷೆಯ ಪ್ರಮಾಣದ ಬಗ್ಗೆ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಇಂದು ಜೀವಾವಧಿ ಶಿಕ್ಷೆ ಆದೇಶ ನೀಡಿದ್ದಾರೆ. 2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್‌ನಲ್ಲಿ ಯೋಗೇಶ್ ಗೌಡ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆರಂಭದಲ್ಲಿ ಈ ಪ್ರಕರಣವನ್ನು ಸ್ಥಳೀಯ ಧಾರವಾಡ ಉಪನಗರ ಪೊಲೀಸರು ತನಿಖೆ ನಡೆಸಿ, ಆಸ್ತಿ ವಿವಾದ ಎಂದು 6 ಮಂದಿಯ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ, ಯೋಗೇಶ್ ಗೌಡ ಪತ್ನಿ ಮಲ್ಲಮ್ಮ ಮತ್ತು ಕುಟುಂಬಸ್ಥರು ಇದೊಂದು ರಾಜಕೀಯ ಪ್ರೇರಿತ ಕೊಲೆ ಎಂದು ಆರೋಪಿಸಿ, ಅಂದಿನ ಸಚಿವರಾಗಿದ್ದ ವಿನಯ್ ಕುಲಕರ್ಣಿ ಅವರ ಕೈವಾಡದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಬಳಿಕ 2019ರಲ್ಲಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು.ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದಾಗ, ಈ ಹತ್ಯೆಯಲ್ಲಿ ವಿನಯ್ ಕುಲಕರ್ಣಿ ಅವರ ಒಳಸಂಚು ಇರುವುದು ದೃಢಪಟ್ಟಿತ್ತು. 2020ರ ನವೆಂಬರ್‌ನಲ್ಲಿ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿತ್ತು. ಒಟ್ಟು 21 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಇದರಲ್ಲಿ ಇಬ್ಬರು ಅಪ್ರೂವರ್ ಆಗಿದ್ದರು, ಹಾಗೂ ಮತ್ತಿಬ್ಬರು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಂಡಿದ್ದರು. ಉಳಿದ 17 ಜನರನ್ನು ನ್ಯಾಯಾಲಯ ಅಪರಾಧಿಗಳೆಂದು ನಿರ್ಣಯಿಸಿತ್ತು. ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 120B (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಇವರು ದೋಷಿಗಳಾಗಿದ್ದಾರೆ. ಶಿಕ್ಷೆ ಪ್ರಮಾಣದ ಕುರಿತ ವಿಚಾರಣೆಯ ವೇಳೆ ಸಿಬಿಐ ಪರ ವಕೀಲರು ಕಠಿಣ ಶಿಕ್ಷೆಗೆ ಪಟ್ಟು ಹಿಡಿದಿದ್ದರು. “ಇದೊಂದು ‘ವಿರಳಾತಿ ವಿರಳ’ ಪ್ರಕರಣ. ಆರೋಪಿಗಳು ವ್ಯವಸ್ಥಿತವಾಗಿ ಪಿತೂರಿ ನಡೆಸಿ, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಸಾಕ್ಷ್ಯ ನಾಶಪಡಿಸುವ ಯತ್ನವೂ ನಡೆದಿದೆ. ಹೀಗಾಗಿ ಅಪರಾಧಿಗಳಿಗೆ ಯಾವುದೇ ವಿನಾಯಿತಿ ನೀಡದೆ, ಕ್ಷಮಾದಾನ ರಹಿತ ಜೀವಾವಧಿ ಶಿಕ್ಷೆ ವಿಧಿಸಬೇಕು” ಎಂದು ಸಿಬಿಐ ಪರ ವಕೀಲರು ಬಲವಾಗಿ ವಾದಿಸಿದ್ದರು. ಜನಪ್ರತಿನಿಧಿಗಳ ಕಾಯ್ದೆಯ ಅನ್ವಯ, ಯಾವುದೇ ಹಾಲಿ ಶಾಸಕ ಅಥವಾ ಸಂಸದನಿಗೆ 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆಯಾದರೆ, ಅವರು ತಕ್ಷಣವೇ ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ. ಇದೀಗ ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟವಾಗಿರುವುದರಿಂದ, ಅವರು ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದು ಖಚಿತವಾಗಿದೆ. ಕರ್ನಾಟಕ ರಾಜಕೀಯ ವಲಯದಲ್ಲಿ ಈ ತೀರ್ಪು ಭಾರೀ ಸಂಚಲನ ಮೂಡಿಸಿದ್ದು, ಧಾರವಾಡದಲ್ಲಿ ಶೀಘ್ರದಲ್ಲೇ ಉಪಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
