ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಸಂಭವಿಸಿದ ಕೌಟುಂಬಿಕ ಕಲಹವೊಂದು ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಪತಿ, ನಂತರ ತನ್ನ ಪುಟ್ಟ ಮಗುವಿನೊಂದಿಗೆ ಬಾವಿಗೆ ಹಾರಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜರುಗಿದೆ. ಅಫಜಲಪುರ ತಾಲೂಕಿನ ಮದರಾ (ಕೆ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು 23 ವರ್ಷದ ಅಂಜಲಿ (ಪತ್ನಿ) ಮತ್ತು ಆಕೆಯ ಪತಿ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮನೆಯಲ್ಲಿ ದಂಪತಿಗಳ ನಡುವೆ ತೀವ್ರ ಜಗಳ ನಡೆದಿದ್ದು, ಆವೇಶಕ್ಕೆ ಒಳಗಾದ ಪತಿ ಅಂಜಲಿಯನ್ನು ಹರಿತವಾದ ಆಯುಧದಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಪತ್ನಿಯನ್ನು ಹತ್ಯೆ ಮಾಡಿದ ನಂತರ, ಪತಿಯು ತನ್ನ ಪುಟ್ಟ ಮಗುವನ್ನು ಎತ್ತಿಕೊಂಡು ಹೋಗಿ ಗ್ರಾಮದ ಸಮೀಪದ ಲಕ್ಷ್ಮೀಪುರ ಎಂಬಲ್ಲಿರುವ ಬಾವಿಗೆ ಹಾರಿದ್ದಾನೆ. ಘಟನೆಯಲ್ಲಿ ಪತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರೆ, ಅದೃಷ್ಟವಶಾತ್ ಕೂಡಲೇ ಮಗುವನ್ನು ಸ್ಥಳೀಯರು ರಕ್ಷಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ರೇವೂರು ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

