ನಗರದ ಯಶವಂತಪುರ ಮತ್ತು ನಂದಿನಿ ಲೇಔಟ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಸುಮಾರು 20.10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಇಬ್ಬರು ಸೇರಿದಂತೆ ಒಟ್ಟು ಆರು ಮಂದಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ರಸ್ತೆ ಬದಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಸ್ಥಳೀಯ ನಾಲ್ವರನ್ನು ಬಂಧಿಸಿದ್ದಾರೆ. ಇವರಿಂದ 4.87 ಕೆಜಿ ಎಂಡಿಎಂಎ, ₹1.62 ಲಕ್ಷ ನಗದು, 4 ಮೊಬೈಲ್ ಹಾಗೂ ಒಂದು ಕಾರನ್ನು ಜಪ್ತಿ ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ 3.18 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳಲಾಗಿದ್ದು, ಒಟ್ಟಾರೆ ಈ ಭಾಗದಲ್ಲಿ ಜಪ್ತಿ ಮಾಡಲಾದ ಮಾದಕ ವಸ್ತುವಿನ ಮಾರುಕಟ್ಟೆ ಮೌಲ್ಯ ಸುಮಾರು ₹15 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಇಲ್ಲಿನ ಪೊಲೀಸರು ಕೇರಳ ಮೂಲದ ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಿ, ಅವರಿಂದ ₹4 ಕೋಟಿ ಮೌಲ್ಯದ 5 ಕೆಜಿ 700 ಗ್ರಾಂ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಿದಾಗ, ಅವರು ಕಡಿಮೆ ಬೆಲೆಗೆ ಹೊರ ರಾಜ್ಯಗಳಿಂದ ಮಾದಕ ವಸ್ತುಗಳನ್ನು ಖರೀದಿಸಿ ತರುತ್ತಿದ್ದರು. ಹೆಚ್ಚಿನ ಲಾಭದ ಆಸೆಗೆ ಸಾರ್ವಜನಿಕರಿಗೆ ಹಾಗೂ ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ. ಪ್ರಸ್ತುತ ಆರೋಪಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಕಿಂಗ್‌ಪಿನ್‌ಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ತನಿಖೆ ಮುಂದುವರೆದಿದೆ. ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್, ಗಣಪತಿ ಮತ್ತು ಅವರ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

