ಬೆಂಗಳೂರು: ನಗರದಲ್ಲಿ ಡ್ರಂಕ್ ಅಂಡ್ ಡ್ರೈವ್ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕಠಿಣ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಕಳೆದ ಒಂದು ವಾರದ ಅವಧಿಯಲ್ಲಿ ನಗರದ ವಿವಿಧ ಭಾಗಗಳಲ್ಲಿ ವಿಶೇಷ ತಪಾಸಣೆ ನಡೆಸಿದ ಪೊಲೀಸರು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮೇ 04ರಿಂದ ಮೇ 10ರವರೆಗೆ ನಡೆದ ವಿಶೇಷ ಡ್ರೈವ್‌ನಲ್ಲಿ ಒಟ್ಟು 45 ಸಾವಿರದ 272 ವಾಹನಗಳನ್ನು ಪರಿಶೀಲಿಸಲಾಗಿದೆ. ಕಾರು, ಬೈಕ್ ಸೇರಿದಂತೆ ವಿವಿಧ ಮಾದರಿಯ ವಾಹನಗಳ ತಪಾಸಣೆ ನಡೆಸಿದ ಸಂಚಾರ ಪೊಲೀಸರು, ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ 575 ಮಂದಿಯ ವಿರುದ್ಧ ಡ್ರಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಅತೀ ವೇಗ ಹಾಗೂ ಅಜಾಗರೂಕ ಚಾಲನೆ ಮಾಡಿದವರ ಮೇಲೂ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಕಳೆದ ಒಂದು ವಾರದಲ್ಲಿ ಅತೀ ವೇಗ ಮತ್ತು ನಿರ್ಲಕ್ಷ್ಯ ಚಾಲನೆ ಸಂಬಂಧ 179 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಸುಮಾರು 1 ಲಕ್ಷ 80 ಸಾವಿರ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

