ಚಾಮರಾಜನಗರ: ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕೊತ್ತಲವಾಡಿ ಗ್ರಾಮದಲ್ಲಿ ಕಳೆದ ವರ್ಷ ನಡೆದಿದ್ದ ಚಿರತೆ ವಿಷಪ್ರಾಶನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಕಳೆದ ಜುಲೈ 10ರಂದು ಚಿರತೆಯೊಂದು ವಿಷಪ್ರಾಶನದಿಂದ ಸಾವನ್ನಪ್ಪಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಬುಧವಾರ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕೊತ್ತಲವಾಡಿ ಗ್ರಾಮದ ದೊಡ್ಡಸ್ವಾಮಿ ಬಿನ್ ಬಸಪ್ಪ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

