ಉತ್ತರ ಕನ್ನಡ : ರಾಜ್ಯದಲ್ಲಿ ತಲೆತಗ್ಗಿಸುವಂತಹ ಹೀನ ಕೃತ್ಯವೊಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ಹೆತ್ತ ತಂದೆಯೇ ತನ್ನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದ್ದು, ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆರೋಪಿ ತಂದೆಯು ಪ್ರತಿನಿತ್ಯ ಮದ್ಯಸೇವನೆ ಮಾಡಿ ಮನೆಗೆ ಬಂದು ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಘಟನೆಯ ದಿನ ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿದ ಈ ಕಾಮುಕ ತಂದೆ, ಹೆತ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಂದೆಯ ವಿಕೃತ ಕೃತ್ಯದಿಂದ ಆಘಾತಕ್ಕೊಳಗಾದ ಬಾಲಕಿ, ತಾಯಿಗೆ ವಿಷಯ ತಿಳಿಸಿದ್ದಾಳೆ. ಮಗಳ ಅಳಲನ್ನು ಕೇಳಿ ಧೃತಿಗೆಡದ ತಾಯಿ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ವಿಕೃತ ಕಾಮಿ ತಂದೆಯನ್ನು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ನಡೆಸಿರುವುದರಿಂದ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕಠಿಣ ಪ್ರಕರಣ ದಾಖಲಿಸಲಾಗಿದೆ. ಸದ್ಯ ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಘಟನೆ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆತ್ತ ಮಗಳ ಮೇಲೆಯೇ ದೌರ್ಜನ್ಯ ಎಸಗಿದ ರಾಕ್ಷಸನಿಗೆ ಕಠಿಣ ಶಿಕ್ಷೆಯಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

