ಕೋಲಾರ: ಬಂಗಾರಪೇಟೆ ತಾಲೂಕಿನ ಎಸ್.ಜಿ ಕೋಟೆ ಸಮೀಪದ ಚೌಡೇಶ್ವರಿ ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಭಾನುವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಐದು ಕಾರುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಮಾಲೀಕ ಈರಣ್ಣ ಅವರಿಗೆ ಸೇರಿದ ಗ್ಯಾರೇಜ್‌ನಲ್ಲಿ ತಡರಾತ್ರಿ ಹಠಾತ್ ಬೆಂಕಿ ಹೊತ್ತಿಕೊಂಡಿದ್ದು, ಒಳಗೆ ನಿಲ್ಲಿಸಿದ್ದ ಮೂರು ಕಾರುಗಳು ಸಂಪೂರ್ಣವಾಗಿ ಭಸ್ಮವಾಗಿವೆ. ಗ್ಯಾರೇಜ್ ಹೊರಭಾಗದಲ್ಲಿ ನಿಲ್ಲಿಸಿದ್ದ ಇನ್ನೂ ಎರಡು ಕಾರುಗಳಿಗೆ ಭಾಗಶಃ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಸಮಯದಲ್ಲಿ ಸರ್ವಿಸ್ ಸೆಂಟರ್‌ನಲ್ಲಿ ಸಿಬ್ಬಂದಿ ಯಾರೂ ಇಲ್ಲದಿದ್ದ ಕಾರಣ ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂಪಾಯಿ ಮೌಲ್ಯದ ವಾಹನಗಳು ಹಾಗೂ ಆಸ್ತಿಪಾಸ್ತಿ ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳೀಯರಿಂದ ಮಾಹಿತಿ ದೊರೆತ ತಕ್ಷಣ ಬಂಗಾರಪೇಟೆ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಬಳಿಕ ಬಂಗಾರಪೇಟೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಅಗ್ನಿ ಅವಘಡದ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

