ಹೂವಿನಹಡಗಲಿ ಪಟ್ಟಣದ ಸರ್ಕಾರಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಮಂಜುಳಾ ತಂಬ್ರಹಳ್ಳಿ ಅವರನ್ನು ಕರ್ತವ್ಯ ಲೋಪದ ಆರೋಪದ ಮೇರೆಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಮಂಜುಳಾ ಅವರು ವಿದ್ಯಾರ್ಥಿ ನಿಲಯದಿಂದ ಅಕ್ರಮವಾಗಿ ಅಕ್ಕಿ ಸಾಗಣೆ ಮಾಡುತ್ತಿದ್ದಾರೆ ಎಂದು ಕೆ.ಆರ್.ಎಸ್. ಪಕ್ಷದ ಪದಾಧಿಕಾರಿಗಳು ನೀಡಿದ ಮೌಖಿಕ ದೂರಿನ ಮೇರೆಗೆ ಹಡಗಲಿ ತಾಲ್ಲೂಕು ಪಂಚಾಯತಿ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿಗಳು ಜಂಟಿಯಾಗಿ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಬೇರೆಡೆಗೆ ಅಕ್ರಮವಾಗಿ ಸಾಗಿಸಲಾಗಿದ್ದ ಅಕ್ಕಿ ದಾಸ್ತಾನನ್ನು ಪುನಃ ವಸತಿ ನಿಲಯಕ್ಕೆ ತಂದಿಟ್ಟಿರುವುದು ಕಂಡುಬಂದಿದೆ. ನಿಲಯಕ್ಕೆ ನೀಡಲಾಗಿದ್ದ ವಾಷಿಂಗ್ ಮೆಷಿನ್ ಅನ್ನು ನಿಯಮಾನುಸಾರ ವಿಲೇವಾರಿ ಮಾಡದೆ ಗುಜರಿಗೆ ಮಾರಾಟ ಮಾಡಲಾಗಿದೆ. ನಿಲಯದಲ್ಲಿದ್ದ ಗ್ಯಾಸ್ ಸಿಲಿಂಡರ್ ಸಹ ಕಳ್ಳತನವಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಎಲ್ಲಾ ಲೋಪಗಳು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸಿವಿಲ್ ಸೇವಾ (ನಡತೆ) ನಿಯಮಗಳು 1966ರ ನಿಯಮ-3 ಅನ್ನು ಉಲ್ಲಂಘಿಸಿದ ಆರೋಪದ ಮೇಲೆ ವಾರ್ಡನ್ ಮಂಜುಳಾ ಅವರನ್ನು ಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅವರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

