ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ಮಾಜಿ ಸೈನಿಕ ಸಂದೀಪ್ ಮಾಂಜರಿ (47) ಅವರ ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಂದೀಪ್ ಅವರನ್ನು ಚಿಕಿತ್ಸೆಯ ವೇಳೆ ಗ್ಲೂಕೋಸ್ ಬಾಟಲಿಗೆ ವಿಷ ಬೆರೆಸಿ ಹತ್ಯೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಂದೀಪ್ ಪತ್ನಿ ಸುಮಾ ಮಾಂಜರಿ ಹಾಗೂ ಆಕೆಯ ಪ್ರಿಯಕರ ಪುಂಡಲೀಕ ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಪತಿ ಸಾವನ್ನಪ್ಪಿದರೆ ₹2 ಕೋಟಿ ವಿಮೆ ಹಣ ದೊರೆಯುತ್ತದೆ ಎಂಬ ಉದ್ದೇಶದಿಂದ ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣದ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಬೆಳಗಾವಿ ಎಸಿ ಶ್ರವಣಕುಮಾರ್ ಸಮ್ಮುಖದಲ್ಲಿ ಹೂತಿದ್ದ ಶವವನ್ನು ಹೊರತೆಗೆದು ತನಿಖೆ ನಡೆಸಲಾಗಿದೆ. ಎಫ್‌ಎಸ್‌ಎಲ್ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಸುಮಾ ಮಾಂಜರಿ ಹಾಗೂ ಪುಂಡಲೀಕನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

