ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇಲೆ ಗರಗ ಪೊಲೀಸ್ ಇನ್ಸ್‌ಪೆಕ್ಟರ್ ಶಿವಯೋಗಿ ಲೋಹಾರ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅಮಾನತುಗೊಳಿಸಿದ್ದಾರೆ. ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳದೆ ಮುಚ್ಚಿಹಾಕಲು ಯತ್ನಿಸಿದ್ದರೆಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣವನ್ನು ‘ಲವ್ ಜಿಹಾದ್’ ಎಂದು ಆರೋಪಿಸಿ ಬಜರಂಗದಳ, ವಿಶ್ವ ಹಿಂದೂ ಪರಿಷತ್ ಹಾಗೂ ಶ್ರೀರಾಮಸೇನೆ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳು ಜೂನ್ 12ರಂದು ಗರಗದಲ್ಲಿ ಪ್ರತಿಭಟನೆ ನಡೆಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದವು. ಪ್ರತಿಭಟನೆಯ ವೇಳೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಭಾರೀ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಪ್ರಸ್ತುತ ಪ್ರಕರಣವನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ಕ್ಕೆ ವರ್ಗಾಯಿಸಲಾಗಿದೆ. ತನಿಖೆ ಮುಂದುವರಿದಿದ್ದು, ಪ್ರಕರಣದಲ್ಲಿ ಇನ್ನಿತರರ ಪಾತ್ರ ಕಂಡುಬಂದರೆ ಅವರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಗುಂಜನ್ ಆರ್ಯ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

