ಅಫಜಲಪುರ (ಕಲಬುರಗಿ ಜಿಲ್ಲೆ): ಕಡಿಮೆ ಬೆಲೆಯಲ್ಲಿ ಖರೀದಿಸಿ, ಸಂಗ್ರಹಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸಲಾಗುತ್ತಿದ್ದ 99.80 ಕ್ವಿಂಟಲ್ ಪಡಿತರ ಅಕ್ಕಿಯನ್ನು ಅಧಿಕಾರಿಗಳು ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ. ಅಫಜಲಪುರ ಮಾರ್ಗವಾಗಿ ಮಹಾರಾಷ್ಟ್ರದ ಧುದನಿಗೆ ಅಕ್ರಮವಾಗಿ ಈ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಖಚಿತ ಮಾಹಿತಿ ಮೇರೆಗೆ ಅಫಜಲಪುರ ತಹಶೀಲ್ದಾರ್ ಸಂಜೀವ್ ಕುಮಾರ್ ದಾಸರ ಆದೇಶದಂತೆ ಆಹಾರ ನಿರೀಕ್ಷಕ ಮಹ್ಮದ್ ಶೋಹೇಬ್ ನೇತೃತ್ವದಲ್ಲಿ ಅತನೂರ ಗ್ರಾಮದ ಬಳಿ ಶುಕ್ರವಾರ ವಾಹನವನ್ನು ತಡೆದು ಪರಿಶೀಲನೆ ನಡೆಸಲಾಯಿತು. ವಶಪಡಿಸಿಕೊಂಡ ಪಡಿತರ ಅಕ್ಕಿಯ ಅಂದಾಜು ಮೌಲ್ಯ ₹3,39,320 ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಅಕ್ಕಿಯನ್ನು ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಸಂಬಂಧ ವಾಹನ ಮಾಲೀಕ ದಿಗಂಬರ ನಾಗಣಸೂರ ವಿರುದ್ಧ ರೇವೂರ (ಬಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಹಾರ ಇಲಾಖೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

