ಚಿಕ್ಕಮಗಳೂರು: ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ.-1) 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 35 ಸಾವಿರ ರೂ.ದಂಡ ವಿಧಿಸಿದೆ. 2025ರ ಮೇ 6ರಂದು ದಾಖಲಾಗಿದ್ದ ಪ್ರಕರಣದಲ್ಲಿ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ನಿವಾಸಿ 25 ವರ್ಷದ ರಂಜನ್ ಗೌಡ ವಿರುದ್ಧ ವಿಚಾರಣೆ ನಡೆಸಲಾಗಿತ್ತು. ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಭಾರತೀಯ ದಂಡ ಸಂಹಿತೆಯ 376(1), 506 ಹಾಗೂ ಪೋಕ್ಸೋ ಕಾಯ್ದೆಯ ಕಲಂ 4ರಡಿ ಶಿಕ್ಷೆ ಪ್ರಕಟಿಸಿದೆ. ಇದೇ ವೇಳೆ, ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆಯಡಿ ನೊಂದ ಬಾಲಕಿಗೆ 6 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ತನಿಖೆಯನ್ನು ಮೂಡಿಗೆರೆ ವೃತ್ತದ ಸಿಪಿಐ ರಾಜಶೇಖರ್ ಕೆ.ವಿ. ಪೂರ್ಣಗೊಳಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ. ಭರತ್ ಕುಮಾರ್ ವಾದ ಮಂಡಿಸಿದ್ದರು. ತನಿಖಾ ಸಹಾಯಕರು ಹಾಗೂ ನ್ಯಾಯಾಲಯದ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಯ ಸೇವೆಯನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

