ಬೆಂಗಳೂರು: ಪ್ರೀತಿಸುತ್ತಿದ್ದ ಯುವತಿ ಬೇರೆಯವರನ್ನು ಮದುವೆಯಾಗಲು ಒಪ್ಪಿದ್ದಾಳೆ ಎಂಬ ಕಾರಣಕ್ಕೆ ಕೋಪಗೊಂಡ ಯುವಕನೊಬ್ಬ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ವರ್ತೂರಿನಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ನರಸಾಪುರ ಮೂಲದ ನವಾಜ್ ಹಾಗೂ ಪಶ್ಚಿಮ ಬಂಗಾಳ ಮೂಲದ ನಂದಿನಿ ದಾಸ್ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇವರ ಪ್ರೇಮ ಸಂಬಂಧಕ್ಕೆ ಎರಡೂ ಕುಟುಂಬಗಳ ವಿರೋಧ ವ್ಯಕ್ತವಾಗಿದ್ದರಿಂದ ನಂದಿನಿ ಪ್ರಿಯಕರನಿಂದ ದೂರ ಸರಿದು, ಮನೆಯವರು ನಿಶ್ಚಯಿಸಿದ ಮದುವೆಗೆ ಸಮ್ಮತಿ ಸೂಚಿಸಿದ್ದಳು. ಇದರಿಂದ ಆಕ್ರೋಶಗೊಂಡ ನವಾಜ್, ಯುವತಿ ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಒಳನುಗ್ಗಿ ತನ್ನ ಬಳಿಯಿದ್ದ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ಅದೇ ಚಾಕುವಿನಿಂದ ತನ್ನ ಕತ್ತನ್ನು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಸ್ಥಳೀಯರು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

