ಮೈಸೂರು ನಗರದ ತಿಲಕ್ ಪಾರ್ಕ್ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಹಾಗೂ ಇತರ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ 6 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹4 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತುಗಳು ಹಾಗೂ ₹40 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ತಿಳಿಸಿದ್ದಾರೆ. ಬಂಧಿತರಲ್ಲಿ ಸತೀಶ್ (37), ಪ್ರಮೋದ್ ಕುಮಾರ್ (28), ದಿಶಾಂತ್ (21), ದರ್ಶನ್ (28), ಅಮೋಘ (21) ಹಾಗೂ ಮಂಜುನಾಥ್ (35) ಸೇರಿದ್ದಾರೆ. ಇವರು ಕಾರಿನಲ್ಲಿ ಬಂದು ನಗರದ ಶೇಷಾದ್ರಿಪುರಂ ಕಾಲೇಜು ಸಮೀಪ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ವಿಶೇಷ ಪೊಲೀಸ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಲಾಗಿದ್ದು, ಡ್ರಗ್ಸ್ ಜಾಲದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಕಾರ್ಯಾಚರಣೆ ಯಶಸ್ವಿಗೊಳಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

