ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಸಾರ್ವಜನಿಕರ ಎದುರೇ ಯುವತಿಯೊಬ್ಬಳನ್ನು ತಲವಾರಿನಿಂದ ಹಲ್ಲೆ ಮಾಡಿ ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಕಕ್ಯಪದವು ಸಮೀಪದ ಕೊಡಂಗೆಯ ನಿವಾಸಿ ಲಾವಣ್ಯ (25) ಮೃತ ಯುವತಿಯಾಗಿದ್ದು, ಕಲ್ಲಡ್ಕದ ಖಾಸಗಿ ಚಿಕಿತ್ಸಾಲಯದಲ್ಲಿ ಶುಶ್ರೂಷಕಿಯಾಗಿ ಕೆಲಸ ಮಾಡುತ್ತಿದ್ದರು. ಆರೋಪಿ ಚೇತನ್, ಮೃತಳ ದೂರದ ಸಂಬಂಧಿಯಾಗಿದ್ದು, ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲೇ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಕೆಲಸ ಮುಗಿಸಿ ಮನೆಗೆ ತೆರಳಲು ಬಸ್ ಹತ್ತಿದ್ದ ಲಾವಣ್ಯ ಮೇಲೆ ಆರೋಪಿ ತಲವಾರಿನಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೃತ್ಯದ ಬಳಿಕ ಆರೋಪಿ ತಲವಾರನ್ನು ಸ್ಥಳದಲ್ಲೇ ಬಿಟ್ಟು ಕಾರಿನಲ್ಲಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

